ಕೆಆರ್​ಎಸ್ ಬಳಿ ಅಕ್ರಮ ಗಣಿಗಾರಿಕೆ ನಿಷೇಧಕ್ಕೆ ಸಂಸದೆ ಸುಮಲತಾ ಸೂಚನೆ

Update: 2020-09-11 18:11 GMT

ಮಂಡ್ಯ, ಸೆ.11: ಕೆಆರ್​ಎಸ್‍ನ ಬಳಿ ಇರುವ ಬೇಬಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯ ನಿಷೇದಕ್ಕೆ ಕಟ್ಟುನಿಟ್ಟಿನ ಕ್ರಮವಹಿಸಬೇಕು. ಇದರಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿರುವದರಿಂದ ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನಗಳು ಬಂದಿದ್ದರೂ ಅಭಿವೃದ್ಧಿ ಕಾರ್ಯಕ್ರಮಗಳ ಕೈಗೊಳ್ಳದಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲೆಯಲ್ಲಿನ ಪ್ರಾಥಾಮಿಕ ಆರೋಗ್ಯ ಕೇಂದ್ರಗಳಲ್ಲಿ ಶಸ್ತ್ರಚಿಕಿತ್ಸೆಗಾಗಿ ಸುಸಜ್ಜಿತವಾದ ವ್ಯವಸ್ಥೆಯ ಇರುವ ಬಗ್ಗೆ ಮತ್ತು ದಿನದಿಂದ ದಿನಕ್ಕೆ ಕೋವಿಡ್ ಸೋಕಿಂತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತೆಗೆದುಕೊಂಡಿರುವ ವ್ಯವಸ್ಥಿತವಾದ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು.

ಮದ್ದೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ರಸ್ತೆಗಳು ಅದ್ವಾನಗೊಂಡಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ ದುರಸ್ತಿಗೆ ಕ್ರಮವಹಿಸಬೇಕು. ರೈತರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು.

ಕೇಂದ್ರ ಸರಕಾರವು ಪಿಎಂಜಿಎಸ್‍ವಿ ಯೋಜನೆಯಡಿ 190 ಕಿಲೋಮೀಟರ್ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದ್ದರೂ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಮೈಸೂರು ಮತ್ತು ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಜಿಪಂ ಸಿಇಒ ಜುಲ್ಫಿಕರ್ ಉಲ್ಲಾ, ಅಪರ ಜಿಲ್ಲಾಧಿಕಾರಿ ಶೈಲಜಾ, ತಾಲೂಕು ಪಂಚಾಯಿತಿಯ ಅಧ್ಯಕ್ಷರು ಮತ್ತು  ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News