ಶಿರಾ ಕ್ಷೇತ್ರ ಉಪಚುನಾವಣೆ ಜೆಡಿಎಸ್ ಗೆ ಸತ್ವ ಪರೀಕ್ಷೆ: ಕುಮಾರಸ್ವಾಮಿ

Update: 2020-09-11 18:44 GMT

ಬೆಂಗಳೂರು, ಸೆ. 11: ಶಾಸಕ ಸತ್ಯನಾರಾಯಣ ನಿಧನದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪಕ್ಷಕ್ಕೆ ಸತ್ವ ಪರೀಕ್ಷೆಯಾಗಿದ್ದು, ಒಗ್ಗಟ್ಟಿನಿಂದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವ ಮೂಲಕ ಪಕ್ಷದ ಭದ್ರಕೋಟೆಯ ನ್ನು ಉಳಿಸಿಕೊಳ್ಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ಶುಕ್ರವಾರ ಇಲ್ಲಿನ ಜೆಪಿ ಭವನದಲ್ಲಿ ನಡೆದ ಶಿರಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ಉಪಚುನಾವಣೆ ಬರುತ್ತಿದೆ. ಪಕ್ಷದ ಹಿಡಿತದಲ್ಲಿದ್ದ ಶಿರಾ ಕ್ಷೇತ್ರವನ್ನು ಉಳಿಸಿಕೊಳ್ಳಬೇಕಿದೆ. ಸೋಮವಾರ(ಸೆ.14)ದಿಂದ ಕ್ಷೇತ್ರದಲ್ಲಿ ಪಕ್ಷ ಮೈತ್ರಿ ಸರಕಾರದ ಅವಧಿಯಲ್ಲಿ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಕ್ಷೇತ್ರದ ಜನರಲ್ಲಿ ಜಾಗೃತಿ ಮೂಡಿಸಲು ಪಕ್ಷದ ಮುಖಂಡರು ಶ್ರಮಿಸಬೇಕು ಎಂದು ಸಲಹೆ ಮಾಡಿದರು.

ಉಪ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ. ದೇವಾಲಯಗಳಿಗೆ ಹಣ ನೀಡುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಹೀಗಾಗಲೇ ಪ್ರಚಾರ ಆರಂಭಿಸಿವೆ. ಜೆಡಿಎಸ್ ನಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ ಎಂಬ ಬಗ್ಗೆ ಗಮನಿಸಿದ್ದೇನೆ. ಬಿಜೆಪಿ ನಾಯಕರು ಶಿರಾ ಕ್ಷೇತ್ರದಲ್ಲಿ ತೆರಳುತ್ತಿದ್ದು, ಮತದಾರರಿಗೆ ಆಮಿಷವೊಡ್ಡುತ್ತಿದ್ದಾರೆ. ಆದರೆ, ನೆರೆ ಸಂತ್ರಸ್ತರಿಗೆ ಇನ್ನೂ ಮನೆ ನಿರ್ಮಿಸಿಕೊಟ್ಟಿಲ್ಲ. ಕೊರೋನ ಸೋಂಕು ನಿಯಂತ್ರಣದ ಹೆಸರನಲ್ಲಿ ಹಣ ಲೂಟಿ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ ಎಂದು ದೂರಿದರು.

ಪ್ರಾದೇಶಿಕ ಪಕ್ಷದ ಶಕ್ತಿ ಉಳಿಸಿಕೊಳ್ಳುವ ಹೊಣೆ ಮುಖಂಡರು ಮತ್ತು ಕಾರ್ಯಕರ್ತರ ಮೇಲಿದೆ. ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬುದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಕೆಲಸ ಮಾಡಬೇಕು. ಅಭ್ಯರ್ಥಿಯ ಕೈ ಬಲಪಡಿಸುವಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ನನಗೆ ಆರೋಗ್ಯ ಸರಿಯಿಲ್ಲ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ವಯಸ್ಸಾಗಿದೆ. ಇಂತಹ ಸಂದರ್ಭದಲ್ಲಿ ಶಿರಾ ಕ್ಷೇತ್ರದ ಉಪ ಚುನಾವಣೆಗೆ ಎದುರಾಗಿದ್ದು, ಮುಖಂಡರು ಮತ್ತು ಕಾರ್ಯಕರ್ತರು ಒಂದೆಡೆ ಕುಳಿತು ಚರ್ಚೆ ಮಾಡಬೇಕು. ಎಲ್ಲರೂ ಒಗ್ಗಟ್ಟಿನಿಂದ ವಿಶ್ವಾಸಕ್ಕೆ ಬರಬೇಕು. ನಾನು ನಿಮ್ಮನ್ನು ಇಲ್ಲಿ ಕರೆದಿರುವುದು ಅಭ್ಯರ್ಥಿಯ ಹೆಸರನ್ನು ಘೋಷಿಸಲು ಅಲ್ಲ. ಸೂಕ್ತ ಮತ್ತು ಗೆಲ್ಲುವ ಅಭ್ಯರ್ಥಿಯನ್ನು ನೀವೇ ಒಮ್ಮತದಿಂದ ಆಯ್ಕೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News