ರಾಜ್ಯಾದ್ಯಂತ ಇನ್ನೊಂದು ವಾರ ಭಾರೀ ಮಳೆ ಸಾಧ್ಯತೆ

Update: 2020-09-13 14:56 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ. 13: ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ರಾಜ್ಯಾದ್ಯಂತ ಇನ್ನೊಂದು ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ರಾಜ್ಯದ ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

ಬಯಲು ಸೀಮೆ ಭಾಗಗಳಾದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಮುಂಬೈ ಕರ್ನಾಟಕದ ಬೆಳಗಾವಿ ಮೈಸೂರು ಭಾಗದ ಚಾಮರಾಜನಗರ ಜಿಲ್ಲೆಗಳಲ್ಲಿಯೂ ಮುಂದಿನ ಎರಡು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ. ಎರಡೂ ದಿನವೂ ಮೋಡ ಮುಸುಕಿದ ವಾತಾವರಣ ಇರಲಿದೆ. ಹಲವು ಕಡೆಗಳಲ್ಲಿ ಚದುರಿದಂತೆ ಮಳೆಯಾಗಲಿದ್ದು, ಕೆಲವೆಡೆ ಗುಡುಗು ಸಹಿತ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಉತ್ತರ ಹಾಗೂ ದಕ್ಷಿಣ ಭಾಗದ ಹಲವೆಡೆ ಹೆಚ್ಚು ಮಳೆಯಾಗಿದೆ. ಮಾರುತಿ ಮಂದಿರದಲ್ಲಿ 25.5 ಮಿ.ಮೀ. ಮಳೆಯಾಗಿದೆ. ಹಂಪಿನಗರ 22, ಚಾಮರಾಜಪೇಟೆ, ವಿವಿ ಪುರಂ ತಲಾ 21.5, ಬಸವನಗುಡಿ 20.5, ಅಗ್ರಹಾರ ದಾಸರಹಳ್ಳಿ 19, ರಾಜಮಹಲ್ ಗುಟ್ಟಹಳ್ಳಿ 14.5 ಮಿ.ಮೀ.ನಷ್ಟ್ಟು ಮಳೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News