ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

Update: 2020-09-14 10:50 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.14: ಕರಾವಳಿ ಜಿಲ್ಲೆಗಳಲ್ಲಿ ಸೆ.17ರತನಕ ಮಳೆಯಾಗುವ ನಿರೀಕ್ಷೆ ಇದೆ. ವೇಗವಾಗಿ ಗಾಳಿಯೂ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಸೋಮವಾರವೂ ಮೋಡಕವಿದ ವಾತಾವರಣವಿತ್ತು. ಆಗಾಗ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ನಗರದಲ್ಲಿ ಉಷ್ಣಾಂಶ ಕುಸಿತವಾಗಿದೆ. ಮುಂದಿನ 24 ಗಂಟೆಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಉತ್ತಮ ಮಳೆ ಸುರಿಯುತ್ತಿದೆ. ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನಾಪೋಕ್ಲು, ಚೇರಂಬಾಣೆ ಭಾಗದಲ್ಲಿ ಹಳ್ಳಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದಿಂದ ಕಾವೇರಿ ನದಿಯಲ್ಲಿನ ಒಳಹರಿವು ಹೆಚ್ಚಾಗಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸೆ.17ರ ತನಕ ಮಳೆ ಮುಂದುವರಿಯಲಿದೆ. ಈ ಭಾಗದಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News