2011ರ ಕೆಪಿಎಸ್‌ಸಿ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ಆರೋಪ: ಸಚಿವ ಸಂಪುಟ ಉಪ ಸಮಿತಿ ರಚನೆ

Update: 2020-09-15 15:58 GMT

ಬೆಂಗಳೂರು, ಸೆ.15: 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಕೆಪಿಎಸ್‌ಸಿಯ ಅಂದಿನ ಅಧ್ಯಕ್ಷ ಮತ್ತು 9 ಸದಸ್ಯರನ್ನು ಅಭಿಯೋಜನೆ(ಪ್ರಾಸಿಕ್ಯೂಷನ್)ಗೆ ಒಳಪಡಿಸುವಂತೆ ರಾಷ್ಟ್ರಪತಿಗೆ ಶಿಫಾರಸು ಮಾಡಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಚರ್ಚಿಸಿ ಶಿಫಾರಸ್ಸು ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾನೂನು ಮತ್ತು ಸಂದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರನ್ನೊಳಗೊಂಡ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ‘ಈ ಪ್ರಕರಣದ ಕುರಿತು ಕೆಎಟಿ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿದ ತೀರ್ಪುಗಳನ್ನು ಪರಾಮರ್ಶಿಸಿ, ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಬೇಕೇ, ಬೇಡವೇ ಎಂಬುದರ ಬಗ್ಗೆ ಶಿಫಾರಸು ಮಾಡಲು ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದರು.

‘ಪ್ರಾಸಿಕ್ಯೂಷನ್‍ಗೆ ರಾಷ್ಟ್ರಪತಿ ಅನುಮತಿ ನೀಡಬೇಕು. ಆದರೆ, ಹಿಂದಿನ ಸರಕಾರ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‍ಗೆ ಅನುಮತಿ ಕೇಳಿತ್ತು. ಇದರಿಂದಾಗಿ, ಪ್ರಾಸಿಕ್ಯೂಷನ್‍ಗೆ ಅವಕಾಶ ಸಿಕ್ಕಿರಲಿಲ್ಲ. ಅಲ್ಲದೆ, ವಿಧಾನಮಂಡಲದ ಅಧಿವೇಶನದಲ್ಲಿ ಎಲ್ಲ ಪಕ್ಷಗಳ ಸದಸ್ಯರು, ಈ ಪ್ರಕರಣದಲ್ಲಿ ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರ ವಿರುದ್ಧ ಗುರುತರವಾದ ಯಾವ ಆಪಾದನೆಗಳು ಇಲ್ಲ ಎಂದು ಚರ್ಚೆ ಮಾಡಿದ್ದರು. ಆಯ್ಕೆಯಾದ ಅಭ್ಯರ್ಥಿಗಳಿಗೆ ತೊಂದರೆ ಮಾಡುವುದು ಬೇಡ ಎಂಬ ಬೇಡಿಕೆಯನ್ನಿಟ್ಟಿದ್ದರು ಎಂದು ಮಾಧುಸ್ವಾಮಿ ತಿಳಿಸಿದರು.

ಸಿಐಡಿಯಲ್ಲಿ ದಾಖಲಾದ ಪ್ರಕರಣವನ್ನು ಪರಿಶೀಲನೆ ನಡೆಸಲಾಗುವುದು. ಕಾನೂನಾತ್ಮಕವಾಗಿ ಸಾಕಷ್ಟು ಅಡ್ಡಿಗಳಿವೆ. ಈಗಾಗಲೆ ಸಾಕಷ್ಟು ವಿಳಂಬವಾಗಿದೆ. ಈ ಪ್ರಕರಣದಲ್ಲಿ ಯಾವುದೇ ಮಹತ್ವ ಇಲ್ಲ. ಸಂಪುಟ ಉಪ ಸಮಿತಿ ನೀಡುವ ಶಿಫಾರಸ್ಸಿನಂತೆ ಸಚಿವ ಸಂಪುಟ ಸಭೆ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News