ಮುಖ್ಯಮಂತ್ರಿಯನ್ನು ಭೇಟಿಯಾದ ಮುಸ್ಲಿಮ್ ಧಾರ್ಮಿಕ ಮುಖಂಡರ ನಿಯೋಗ: ಅಮಾಯಕರ ಬಿಡುಗಡೆಗೆ ಮನವಿ

Update: 2020-09-15 16:01 GMT

ಬೆಂಗಳೂರು, ಸೆ.15: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್‍ಭೈರಸಂದ್ರದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಅಮಾಯಕರನ್ನು ತ್ವರಿತವಾಗಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಉಲಮಾಗಳ ನಿಯೋಗವು ಈ ಗಲಭೆ ಪ್ರಕರಣದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಹಾಗೂ ಸರಕಾರಿ ಆಸ್ತಿಪಾಸ್ತಿಗಳಿಗೆ ನಷ್ಟವುಂಟು ಮಾಡಿರುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು, ಶಿಕ್ಷೆಗೊಳಪಡಿಸಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿತು.

ಆದರೆ, ಈ ಘಟನೆಗೆ ಸಂಬಂಧಿಸಿದಂತೆ ಹಲವಾರು ಮಂದಿ ಅಮಾಯಕರನ್ನು ಬಂಧಿಸಲಾಗಿದೆ. ಇದರಿಂದಾಗಿ, ಅವರ ಕುಟುಂಬಗಳು ಆತಂಕದಲ್ಲಿವೆ. ಕೊರೋನದಿಂದಾಗಿ ಸಾಕಷ್ಟು ಮಂದಿ ತಮ್ಮ ಕೆಲಸಗಳನ್ನು ಕಳೆದುಕೊಂಡು ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕುಟುಂಬಗಳಿಗೆ ಆಧಾರವಾಗಿರುವವರು ಅನಗತ್ಯವಾಗಿ ಜೈಲು ಪಾಲಾದರೆ ಬಡ ಕುಟುಂಬಗಳ ಪರಿಸ್ಥಿತಿ ಹೇಗಿರಬೇಕು ಎಂದು ನಿಯೋಗ ತಿಳಿಸಿತು.

ರಾಜ್ಯದಲ್ಲಿ ಕೋಮುಸೌಹಾರ್ದತೆಯನ್ನು ಕಾಪಾಡುವಲ್ಲಿ ತಮ್ಮ ನೇತೃತ್ವದ ಸರಕಾರ ಸದಾ ಕೆಲಸ ಮಾಡಿದೆ. ಈ ಹಿಂದೆಯೂ ತಬ್ಲೀಗ್ ವಿಚಾರದಲ್ಲಿ ತಾವು ಕೈಗೊಂಡ ನಿಲುವು ಮೆಚ್ಚುವಂತದ್ದು. ಈ ಒಟ್ಟಾರೆ ಘಟನೆಗೆ ಕೋಮು ಬಣ್ಣ ಹಚ್ಚಲು ಅವಕಾಶ ಕೊಡಬೇಡಿ. ಕೋಮುಸೌಹಾರ್ದತೆಯನ್ನು ಉಳಿಸುವ ನಿಟ್ಟಿನಲ್ಲಿ ಶ್ರಮಿಸಿ ಎಂದು ಉಲಮಾಗಳು ಮನವಿ ಮಾಡಿದರು.

ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಒಂದು ಪೋಸ್ಟ್ ನಿಂದಾಗಿ ಇಷ್ಟೆಲ್ಲ ಆಗಿದೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಈ ಮಟ್ಟಕ್ಕೆ ಹೋಗುತ್ತಿರಲಿಲ್ಲ. ಬಹುಸಂಸ್ಕೃತಿ, ಬಹುಧರ್ಮಗಳನ್ನು ಅನುಸರಿಸುವ ನಮ್ಮ ದೇಶದಲ್ಲಿ ಯಾವುದೇ ಧರ್ಮದ ಗೌರವಾನಿತ್ವರ ಅವಹೇಳನಕ್ಕೆ ಅವಕಾಶ ನೀಡಬಾರದು. ಸೈಬರ್ ಕ್ರೈಮ್ ಪೊಲೀಸರು ಇಂತಹ ಸಂದರ್ಭದಲ್ಲಿ ಸ್ವಯಂಪ್ರೇರಿತವಾಗಿ ಕ್ರಮಕ್ಕೆ ಮುಂದಾಗಬೇಕು ಎಂದು ನಿಯೋಗ ಕೋರಿತು.

ಈ ಘಟನೆಯಲ್ಲಿ ಬಂಧನಕ್ಕೊಳಗಾಗಿರುವ ಅಮಾಯಕರನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಲವು ಏಜೆಂಟ್‍ಗಳು ಅವರ ಕುಟುಂಬದವರಿಂದ ಹಣ ವಸೂಲಿಗೆ ಇಳಿದಿರುವ ಮಾಹಿತಿಯೂ ಇದೆ. ಆದುದರಿಂದ, ತನಿಖೆ ವೇಳೆ ಅಮಾಯಕರೆಂದು ಕಂಡು ಬಂದವರನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿತು.

ಉಲಮಾಗಳ ಮನವಿಯನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಯಾವುದೆ ಕಾರಣಕ್ಕೂ ಅಮಾಯಕರಿಗೆ ಶಿಕ್ಷೆಯಾಗದಂತೆ ನೋಡಿಕೊಳ್ಳಲಾಗುವುದು. ಈಗಾಗಲೆ ಈ ಸಂಬಂಧ ತನಿಖೆ ನಡೆಸುತ್ತಿರುವವರಿಗೆ ಸೂಚನೆ ನೀಡಲಾಗಿದೆ. ಅಮಾಯಕರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ನಿಯೋಗಕ್ಕೆ ಭರವಸೆ ನೀಡಿದರು.

ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಉಲಮಾಗಳ ನಿಯೋಗದಲ್ಲಿ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ, ಮೌಲಾನ ಸಯ್ಯದ್ ಶಬ್ಬೀರ್ ಅಹ್ಮದ್ ನದ್ವಿ, ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ, ಮುಫ್ತಿ ಶಂಶುದ್ದೀನ್ ಬಜ್ಲಿ, ಜಮಾತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ.ಬೆಳಗಾಮಿ ಮುಹಮ್ಮದ್ ಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News