ಭಾರತದ ಇತಿಹಾಸ, ಸಂಸ್ಕೃತಿ ಅಧ್ಯಯನಕ್ಕೆ ಸಮಿತಿ ರಚನೆ: ಕನ್ನಡಿಗರು, ಮಹಿಳೆಯರ ಕಡೆಗಣನೆಗೆ ಹೆಚ್‌ಡಿಕೆ ಕಿಡಿ

Update: 2020-09-16 14:45 GMT

ಬೆಂಗಳೂರು, ಸೆ. 16: ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ, ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ?' ಎಂದು ಪ್ರಶ್ನಿಸಿದ್ದಾರೆ.

'ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ' ಎಂದು ಎಚ್.ಡಿ.ಕುಮಾರಸ್ವಾಮಿ ಇದೇ ವೇಳೆ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News