ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2020-09-16 16:36 GMT

ಬೆಂಗಳೂರು, ಸೆ.16: ಎಸ್ಸಿ, ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ-1989 ಹಾಗೂ ಎಸ್ಸಿ, ಎಸ್ಟಿ(ದೌರ್ಜನ್ಯ ತಡೆ) ಅಧಿನಿಯಮ-1995ರ ಅಡಿಯಲ್ಲಿ ದಾಖಲಾಗುವ ಪ್ರಕರಣಗಳ ವಿಚಾರಣೆಯ ವಿಳಂಬ ನೀತಿಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಕಾಯ್ದೆ ಹಾಗೂ ಅಧಿನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನೆ ಸಂಘದ ಸಂಚಾಲಕಿ ಪಿ.ಯಶೋಧ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಸರಕಾರಕ್ಕೆ ಈ ನಿರ್ದೇಶನ ನೀಡಿದೆ.

ಎಸ್ಸಿ, ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ-1989 ಹಾಗೂ ಎಸ್ಸಿ, ಎಸ್ಟಿ(ದೌರ್ಜನ್ಯ ತಡೆ) ಅಧಿನಿಯಮ-1995ರ ಅಡಿಯಲ್ಲಿ ದಾಖಲಾಗುವ ಪ್ರಕರಣಗಳ ವಿಚಾರಣೆಯ ನಿಧಾನಗತಿ, ಚಾರ್ಜ್‍ಶೀಟ್ ಸಲ್ಲಿಕೆಯಲ್ಲಿ ವಿಳಂಬ ಹಾಗೂ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಕಾನೂನು ಪಾಲನೆಯಲ್ಲಿ ಲೋಪವಾಗಿರುವ ಬಗ್ಗೆ ಒಂದು ತಿಂಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರಕಾರಕ್ಕೆ ನ್ಯಾಯಪೀಠವು ನಿರ್ದೇಶನ ನೀಡಿದೆ.

ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ವಿಚಾರಣೆ ನಡೆಸಲು 9 ವಿಶೇಷ ಕೋರ್ಟ್ ಗಳನ್ನು ಸ್ಥಾಪಿಸುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ. ವಿಶೇಷ ಕೋರ್ಟ್ ಗಳಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳು ಎಷ್ಟು? ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಧೀಶರಿಗೆ ತರಬೇತಿ ಕಾರ್ಯಾಗಾರಗಳೇನಾದರೂ ಮಾಡಲಾಗಿದೆಯೇ ಎಂಬ ಬಗ್ಗೆ ಹೈಕೋರ್ಟ್ ರಿಜಿಸ್ಟ್ರಾರ್ (ನ್ಯಾಯಾಂಗ) ಒಂದು ತಿಂಗಳಲ್ಲಿ ವರದಿ ಸಲ್ಲಿಸಬೇಕು. ಅದನ್ನು ರಿಜಿಸ್ಟ್ರಾರ್ ಜನರಲ್ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶನ ನೀಡಿತು.

ಸರಕಾರದ ಪರ ವಕೀಲರು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತ ಲಿಖಿತ ಹೇಳಿಕೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಅರ್ಜಿದಾರರ ಪರ ವಕೀಲೆ ಜಯ್ನಾ ಕೋಠಾರಿ, ಕಾಯ್ದೆ ಪ್ರಕಾರ ಪ್ರಕರಣ ದಾಖಲಾದ 60 ದಿನಗಳಲ್ಲಿ ಚಾರ್ಜ್‍ಶೀಟ್ ಸಲ್ಲಿಸಬೇಕು. ಆದರೆ, 2015ರಿಂದ 2019ರವರೆಗೆ ದಾಖಲಾದ 41 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಪೈಕಿ ಕೇವಲ 6,451 ಪ್ರಕರಣಗಳಲ್ಲಿ ಮಾತ್ರ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. ರಾಜ್ಯ ಮಟ್ಟದ, ಜಿಲ್ಲಾ ಮತ್ತು ಉಪ ವಿಭಾಗ ಮಟ್ಟದ ವಿಚಕ್ಷಣಾ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಭೆಗಳು ನಿಯಮಿತವಾಗಿ ನಡೆದಿಲ್ಲ. ಖುಲಾಸೆ ಪ್ರಕರಣಗಳ ಮರುಪರಿಶೀಲನಾ ಸಮಿತಿಯ ಸಭೆಗಳೂ ನಡೆದಿಲ್ಲ. ದೌರ್ಜನ್ಯಕ್ಕೊಳಗಾದ ವ್ಯಕ್ತಿಗಳು ಮತ್ತು ಅವರ ಕುಟುಂಬದವರಿಗೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕಾಯ್ದೆಯಲ್ಲಿ ಹೇಳಿರುವಂತೆ ಸರಕಾರ ನಡೆದುಕೊಂಡಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕಾಯ್ದೆಯಡಿ ದಾಖಲಾದ ಪ್ರಕರಣಗಳ ವಿಚಾರಣೆಯ ವಿಳಂಬದ ಬಗ್ಗೆ ಒಂದು ತಿಂಗಳಲ್ಲಿ ವಿವರಣೆ ನೀಡಬೇಕು. ವಿಚಕ್ಷಣಾ ಮತ್ತು ಮೇಲ್ವಿಚಾರಣಾ ಸಮಿತಿಗಳು ಮೂರು ತಿಂಗಳಲ್ಲಿ ಕನಿಷ್ಟ 1 ಸಭೆ ನಡೆಸಬೇಕು. ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ತರಬೇತಿ ನೀಡಲು ಬಯಸಿದಲ್ಲಿ ರಾಜ್ಯ ಸರಕಾರ ಕರ್ನಾಟಕ ನ್ಯಾಯಾಂಗ ಅಕಾಡಮಿಯನ್ನು ಸಂಪರ್ಕಿಸಬಹುದು ಎಂದು ಸೂಚಿಸಿ ವಿಚಾರಣೆಯನ್ನು ಅ.15ಕ್ಕೆ ಮುಂದೂಡಿತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News