ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ: ಬಿ.ಶ್ರೀರಾಮುಲು

Update: 2020-09-16 16:50 GMT

ಕಲಬುರಗಿ, ಸೆ.16: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಗ್ಯ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಬುಧವಾರ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮ್ಮ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಬಗೆಹರಿಸಬಹುದೆಂಬ ವಿಶ್ವಾಸದಿಂದ ವೈದ್ಯರು ಅವರನ್ನು ಭೇಟಿ ಮಾಡಿದ್ದಾರೆ. ಬೇರೆ ಯಾವ ಇಲಾಖೆಯಲ್ಲಿಯೂ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.

ಮುಷ್ಕರ ನಿರತ ವೈದ್ಯರಿಗೆ ಇನ್ನೆರಡು ದಿನಗಳಲ್ಲಿ ಸಿಹಿ ಸುದ್ದಿಯನ್ನು ಕೊಡುತ್ತೇವೆ. ಈಗಾಗಲೆ ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲಾಗಿದೆ. ಮುಂದಿನ ದಿನಗಳಲ್ಲಿ ವೈದ್ಯರು ಮುಷ್ಕರ ಕೈಗೊಳ್ಳುವುದಿಲ್ಲ ಎಂಬ ವಿಶ್ವಾಸ ತನಗಿದೆ ಎಂದು ಶ್ರೀರಾಮುಲು ಹೇಳಿದರು.

ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ. ಸದ್ಯದ ಪರಿಸ್ಥಿತಿಯಲ್ಲಿ ಅತಿವೃಷ್ಠಿಗೆ ಕೇಂದ್ರದಿಂದ ಹೆಚ್ಚಿನ ಪರಿಹಾರ ಕೋರುವುದು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ದಿಲ್ಲಿಗೆ ಹೋಗುತ್ತಿದ್ದಾರೆ. ಸೆ.21ರಿಂದ ಅಧಿವೇಶನ ಆರಂಭವಾಗುತ್ತಿದೆ. ಈ ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆ ಕಷ್ಟ ಎಂದು ಅವರು ಹೇಳಿದರು.

ಡ್ರಗ್ಸ್ ಮಾಫಿಯಾ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಸಿನಿಮಾ ನಟರು, ರಾಜಕಾರಣಿಗಳು ಸೇರಿದಂತೆ ಯಾರೇ ಈ ಡ್ರಗ್ಸ್ ಮಾಫಿಯಾ ಜೊತೆ ಶಾಮೀಲಾಗಿದ್ದರೂ ಸರಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ನಮ್ಮ ಯುವ ಸಮೂಹ ಈ ಮಾದಕ ಜಾಲಕ್ಕೆ ಸಿಲುಕಿ ಬಲಿಯಾಗುತ್ತಿದೆ. ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೆ ಇಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News