×
Ad

ಏಕತೆಗಾಗಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ: ಇಕ್ಬಾಲ್ ಅನ್ಸಾರಿ

Update: 2020-09-18 09:33 IST

ಲಕ್ನೋ: ದೇಶದಲ್ಲಿ ಹಿಂದೂ- ಮುಸ್ಲಿಂ ಏಕತೆ ಕಾಪಾಡುವ ಸಲುವಾಗಿ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸುವಂತೆ ಅಯೋಧ್ಯೆ ಆಸ್ತಿ ವಿವಾದದಲ್ಲಿ ಮುಖ್ಯ ಅರ್ಜಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ ಹಲವರು ಆರೋಪಿಗಳಾಗಿರುವ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ವಿಶೇಷ ಸಿಬಿಐ ನ್ಯಾಯಾಲಯ ಈ ತಿಂಗಳ 30ರಂದು ತೀರ್ಪು ನೀಡಲಿದೆ.

"ಸುಪ್ರೀಂಕೋರ್ಟ್ ಅಯೋಧ್ಯೆ ವ್ಯಾಜ್ಯವನ್ನು ಬಗೆಹರಿಸಿದೆ. ಇದೀಗ ರಾಮಮಂದಿರ ಹಾಗೂ ಮಸೀದಿಯನ್ನು ಅಯೋಧ್ಯೆಯ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಿಸಲಾಗುತ್ತಿದೆ. ಬಾಬರಿ ಮಸೀದಿ ಧ್ವಂಸ ಪ್ರಕರಣದ ಹಲವು ಮಂದಿ ಆರೋಪಿಗಳು ಮೃತಪಟ್ಟಿದ್ದಾರೆ. ದೇಶದಲ್ಲಿ ಹಿಂದೂ- ಮುಸ್ಲಿಂ ಏಕತೆಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ವ್ಯಾಜ್ಯ ಕೊನೆಗೊಳಿಸಿ ಎಲ್ಲ 32 ಮಂದಿ ಆರೋಪಿಗಳನ್ನು ವಿಶೇಷ ಸಿಬಿಐ ನ್ಯಾಯಾಲಯ ದೋಷಮುಕ್ತಗೊಳಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ" ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಅಯೋಧ್ಯೆ ಜಾಗದ ವಿವಾದವನ್ನು ಬಗೆಹರಿಸಿದಂತೆ ದೇಶದ ಹಿತಾಸಕ್ತಿ ದೃಷ್ಟಿಯಿಂದ ಸಿಬಿಐ ನ್ಯಾಯಾಲಯ ಕೂಡಾ ವ್ಯಾಜ್ಯ ಕೊನೆಗೊಳಿಸಿ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಬೇಕು ಎಂದು ಅನ್ಸಾರಿ ಸಲಹೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News