ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವ ಧನ ಘೋಷಿಸಲು ಆಗ್ರಹ

Update: 2020-09-18 13:30 GMT

ಬೆಂಗಳೂರು, ಸೆ. 18: ಸರಕಾರ ನೀಡಿದ ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ.ಗೌರವ ಧನವನ್ನು ಕೂಡಲೇ ಘೋಷಿಸಬೇಕು. ಎಲ್ಲ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಬೇಕು. ಕೋವಿಡ್ ಪಾಸಿಟಿವ್ ಬಂದಿರುವ ಎಲ್ಲರಿಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಮತ್ತು ಚಿಕಿತ್ಸೆಯ ಅವಧಿಯಲ್ಲಿ ಸಂಪೂರ್ಣ ಗೌರವಧನ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ.

ಎಲ್ಲ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಜರ್ ಇತ್ಯಾದಿಗಳನ್ನು ಸಮರ್ಪಕವಾಗಿ ನೀಡಬೇಕು. ಬಾಕಿ ಇರುವ ಪ್ರೋತ್ಸಾಹಧನ ಆಶಾಗೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಘೋಷಿಸಿದ 3 ಸಾವಿರ ರೂ. ಕೋವಿಡ್-19 ವಿಶೇಷ ಪ್ರೋತ್ಸಾಹ ಧನವನ್ನು ಇನ್ನೂ ತಲುಪದಿರುವ ಆಶಾಗಳಿಗೆ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಆಗ್ರಹಿಸಿದ್ದಾರೆ.

ಕೊರೋನ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರಿಗೆ ಸರಕಾರ ನೀಡಿದ ಭರವಸೆಯನ್ನು ಇನ್ನೂ ಈಡೇರಿಸಿಲ್ಲ. ಹೀಗಾಗಿ ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲಿ ಆಶಾಗಳು ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಆದುದರಿಂದ ಕೂಡಲೇ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ನಾಗಲಕ್ಷ್ಮೀ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News