ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪ: ಡ್ಯಾನ್ಸರ್ ಕಿಶೋರ್ ಶೆಟ್ಟಿ ಸಹಿತ ಇಬ್ಬರ ಬಂಧನ

Update: 2020-09-19 08:56 GMT

ಮಂಗಳೂರು, ಸೆ.19: ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಶನಿವಾರ ಮುಂಜಾವ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ತಿಳಿಸಿದ್ದಾರೆ.

ಆಯುಕ್ತಾಲಯದ ಕಚೇರಿಯಲ್ಲಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು,ಅಕೀಲ್ ನೌಶಿಲ್(28) ಹಾಗೂ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ(30) ಬಂಧಿತ ಆರೋಪಿಗಳು. ಇವರಿಂದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಎಂಡಿಎಂಎಯನ್ನು ಮುಂಬೈನಿಂದ ಖರೀದಿಸಿ ಮಂಗಳೂರಿನಲ್ಲಿ ಮರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯನ್ನು ಆಧರಿಸಿ ಮಂಗಳೂರು ನಗರದ ಕದ್ರಿ ಪದವು ಪರಿಸರದಲ್ಲಿ ನಿಷೇಧಿತ ಮಾದಕ ವಸ್ತುವಿನೊಂದಿಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೈಕ್, 2 ಮೊಬೈಲ್ ಫೋನ್, ಮಾದಕ ವಸ್ತು ಸೇರಿ ವಶಪಡಿಸಿಕೊಂಡ ವಸ್ತುಗಳ ಮೌಲ್ಯ 1 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಗಳು ಮುಂಬೈನಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು ಎಂದು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಹೇಳಿದರು.

ಆರೋಪಿ ಕಿಶೋರ್ ಅಮನ್ ಶೆಟ್ಟಿ 2011-12ನೆ ಇಸವಿಯಲ್ಲಿ ಝೀ ಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ 2ನ ನೃತ್ಯ ಸ್ಪರ್ಧೆಯಲ್ಲಿ ಡ್ಯಾನ್ಸ್ ಕಿ ಸೂಪರ್ ಸ್ಟಾರ್ ಬಹುಮಾನ ಪಡೆದಿದ್ದ. ಮಾತ್ರವಲ್ಲದೆ, ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದಾನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಸಿಸಿಬಿ ಇನ್ಸ್‌ಪೆಕ್ಟರ್ ಶಿವಪ್ರಕಾಶ್ ಆರ್. ನಾಯ್ಕ್, ಎಕನಾಮಿಕ್ ಆ್ಯಂಡ್ ನಾರ್ಕೊಟಿಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣ ಹಾಗೂ ಸಿಸಿಬಿ ಘಟಕದ ಪಿಎಸ್ಸೈ ಕಬ್ಬಾಳ್‌ರಾಜ್ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಅರುಣಾಂಶಗಿರಿ, ವಿನಯ್ ಗಾಂವ್ಕರ್ ಉಪಸ್ಥಿತರಿದ್ದರು.


ಡ್ಯಾನ್ಸರ್, ಕೊರಿಯೋಗ್ರಾಫರ್ ಹಾಗೂ ಬಾಲಿವುಡ್ ಚಿತ್ರಗಳಲ್ಲಿ ನಟಿಸಿರುವ ಕಿಶೋರ್ ಅಮನ್ ಶೆಟ್ಟಿ ಮುಂಬೈನಲ್ಲಿ ಸಕ್ರಿಯವಾಗಿದ್ದ. ಹಾಗಾಗಿ ಮುಂಬೈ ನಂಟಿನ ಕುರಿತಂತೆಯೂ ತನಿಖೆ ನಡೆಯುತ್ತಿದೆ. ಮಂಗಳೂರಿನಲ್ಲಿ ಪಾರ್ಟಿಗಳನ್ನೂ ಮಾಡುತ್ತಿದ್ದರೆಂಬ ಮಾಹಿತಿ ಇದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ಸ್ಪಷ್ಟ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಅಧಿಕಾರಿಯಾಗಿ ಕೆಲಸ ಮಾಡಿಕೊಂಡಿದ್ದು, ಒಂದು ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಯಾವುದೇ ನಿರ್ದಿಷ್ಟ ಕೆಲಸವಿಲ್ಲದೆ ಮುಂಬೈ, ಬೆಂಗಳೂರು ಮೊದಲಾದ ಕಡೆಗಳಿಂದ ಮಾದಕ ವಸ್ತುಗಳನ್ನು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ.
-ವಿಕಾಸ್ ಕುಮಾರ್ , ಮಂಗಳೂರು ನಗರ ಪೊಲೀಸ್ ಆಯುಕ್ತರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News