ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’

Update: 2020-09-19 14:45 GMT

ಬೆಂಗಳೂರು, ಸೆ.19: ಬಂಗಾಳ ಉಪಸಾಗರದಲ್ಲಿ ಸೆ.20ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯ ಪರಿಣಾಮ ರಾಜ್ಯದಲ್ಲಿ ಸೆ. 22ರವರೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಪ್ರಮುಖವಾಗಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. 

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ.20ರಿಂದ 22ರವರೆಗೆ ಗುಡುಗು ಸಹಿತ ಭಾರೀ ಮಳೆ ನಿರೀಕ್ಷೆ ಇದೆ. ಸೆ.20 ಮತ್ತು 21 ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಕಲಬುರ್ಗಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿ ಭಾರೀ ಮಳೆ ಸಾಧ್ಯತೆ ಇರುವುದರಿಂದ ಸೆ.20 ಮತ್ತು 21ಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿದಲಾಗಿದೆ. ಸೆ.22ರಂದು ಅತೀ ಭಾರೀ ಮಳೆ ಬೀಳಲಿರುವ ಕಾರಣಕ್ಕೆ ಮಲೆನಾಡು ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಗಾಳಿಯು ಪ್ರತಿ ಗಂಟೆಗೆ ಸುಮಾರು 55 ಕಿ.ಮೀ ವೇಗದಲ್ಲಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ಕೊಡಲಾಗಿದೆ. ಮಳೆಯಾಗುವ ಎಲ್ಲ ಪ್ರದೇಶಗಳಲ್ಲಿ ಮೋಡ ಕವಿದ ಹಾಗೂ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆ: ಸೆ. 19ರ ಬೆಳಗ್ಗೆ 8.30ಕ್ಕೆ ಅನ್ವಯವಾಗುವಂತೆ ಕಳೆದ 24 ಗಂಟೆಯಲ್ಲಿ ರಾಯಚೂರು ಜಿಲ್ಲೆಯ ಗಬ್ಬೂರು ಮತ್ತು ದಕ್ಷಿಣ ಕನ್ನಡದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅತೀ ಹೆಚ್ಚು ಅಂದರೆ 8 ಸೆಂ.ಮೀ ಮಳೆ ಸುರಿದಿದೆ. ಉಳಿದಂತೆ ದಕ್ಷಿಣ ಕನ್ನಡದ ಮಂಗಳೂರು, ಮಾಣಿ, ಪಣಂಬೂರು ತಲಾ 7, ದಕ್ಷಿಣ ಕನ್ನಡದ ಮೂಡುಬಿದಿರೆ, ಕೊಡಗಿನ ಭಾಗಮಂಡಲದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News