ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ ಸೇರ್ಪಡೆ

Update: 2020-09-19 16:41 GMT

ಬೆಂಗಳೂರು, ಸೆ. 19: ಜೆಡಿಎಸ್ ತೊರೆದಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ವಕೀಲ ರಮೇಶ್ ಬಾಬು ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ರಮೇಶ್ ಬಾಬು ಅವರನ್ನು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿದರು.

ಕಾಂಗ್ರೆಸ್ ಸೇರಲು 60 ಅರ್ಜಿಗಳು: ಕಾಂಗ್ರೆಸ್ ಪಕ್ಷಕ್ಕೆ ಸೇರಲು ರಾಜ್ಯದ ವಿವಿಧ ಜಿಲ್ಲೆಗಳಿಂದ 60ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಕಾಂಗ್ರೆಸ್ ಪಕ್ಷಕ್ಕೆ ಇವರನ್ನು ಸೇರಿಸಿಕೊಳ್ಳುವ ಮುನ್ನ ಪಕ್ಷದ ಹಿರಿಯ ಮುಖಂಡ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ರಚಿಸಿದ್ದೇವೆ. ಈ ಸಮಿತಿ ಸ್ಥಳೀಯ ಮುಖಂಡರ ಜತೆ ಚರ್ಚಿಸಿ ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂಬುದನ್ನು ತೀರ್ಮಾನಿಸುತ್ತದೆ. ಪಕ್ಷಕ್ಕೆ ಬರುವವರು ಸ್ಥಳೀಯರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡಬೇಕಾಗಿದೆ. ಅನೇಕ ಅರ್ಜಿಗಳ ಬಗ್ಗೆ ಸ್ಥಳೀಯವಾಗಿ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಶೀಘ್ರ ವಿಲೇವಾರಿ: ವಿಧಾನ ಪರಿಷತ್ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗುವ ಹಿನ್ನೆಲೆಯಲ್ಲಿ ರಮೇಶ್ ಬಾಬು ಅವರ ಅರ್ಜಿಯನ್ನು ಬೇಗ ತೀರ್ಮಾನಿಸಲಾಗಿದೆ. ನಾನು, ವಿರೋಧ ಪಕ್ಷದ ನಾಯಕರು ಹಾಗೂ ಹಿರಿಯ ನಾಯಕರು ಚರ್ಚೆ ಮಾಡಿ ರಮೇಶ್ ಹಾಗೂ ಅವರ ಸ್ನೇಹಿತರನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ. ಒಂದೂವರೆ ತಿಂಗಳ ಹಿಂದೆಯೇ ಇವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಲಾಗಿತ್ತಾದರೂ ಕಾರಣಾಂತರಗಳಿಂದ ಮುಂದೂಡಿಕೆಯಾಗಿತ್ತು ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

ರಮೇಶ್ ಬಾಬು ಅವರು ಯಾವುದೇ ಷರತ್ತು ಇಲ್ಲದೆ, ಸೋನಿಯಾ ಗಾಂಧಿ ಅವರ ನಾಯಕತ್ವ ಹಾಗೂ ಪಕ್ಷದ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಜೆಡಿಎಸ್ ಪರವಾಗಿ ಮಾಧ್ಯಮಗಳ ಚರ್ಚೆಯಲ್ಲಿ ಭಾಗವಹಿಸುತ್ತಿದ್ದಾಗಲೂ ರಮೇಶ್ ಅವರು ಕಾಂಗ್ರೆಸ್ ಸಿದ್ಧಾಂತದ ಪರವಾಗಿದುದ್ದನ್ನು ನೋಡಿದ್ದೇವೆ. ಅವರಿಗೆ ಈ ಸಂದರ್ಭದಲ್ಲಿ ನಮ್ಮ ನಾಯಕರೆಲ್ಲರು ಒಟ್ಟಾಗಿ ಸ್ವಾಗತಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥ ಬಿ.ಎಲ್.ಶಂಕರ್, ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಸೇರಿದಂತೆ ಇನ್ನಿತರ ಮುಖಂಡರು ಹಾಜರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News