​ಭಾರೀ ಮಳೆ: ಮಂಗಳೂರು ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

Update: 2020-09-20 06:55 GMT

ಮಂಗಳೂರು, ಸೆ. 20: ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಮಂಗಳೂರು ವಿಶ್ವ ವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಪಿ.ಎಲ್. ಧರ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಯ ಕಾರಣದಿಂದ ಉಭಯ ಜಿಲ್ಲೆಗಳಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಂಗಳವಾರ ನಡೆಯಲಿರುವ ಪರೀಕ್ಷೆಯ ಬಗ್ಗೆ ಸೋಮವಾರದ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಡಾ.ಪಿ.ಎಲ್. ಧರ್ಮ ಹೇಳಿದ್ದಾರೆ.

ಮಳೆಯಿಂದಾಗಿ ಉಭಯ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿನ ರಸ್ತೆ ಸಂಚಾರ ಬಂದ್ ಆಗಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು ಅಸಾಧ್ಯವಾಗಿದೆ. ಹೀಗಾಗಿ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲ್ಪಟ್ಟ ಪರೀಕ್ಷೆಯ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News