ಸೆ.24ಕ್ಕೆ ಆರೋಗ್ಯ ಇಲಾಖೆ ಗುತ್ತಿಗೆ, ಹೊರ ಗುತ್ತಿಗೆ ನೌಕರರಿಂದ ಮುಷ್ಕರ

Update: 2020-09-20 18:05 GMT

ಬೆಂಗಳೂರು, ಸೆ. 20: ರಾಜ್ಯದ ಆರೋಗ್ಯ ಇಲಾಖೆಯ ಅಡಿಯಲ್ಲಿನ ವಿವಿಧ ಇಲಾಖೆಯಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ, ಅರೆವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸೆ.24ರಿಂದ ಅನಿರ್ದಿಷಾವಧಿಯವರೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಈ ಕುರಿತಂತೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರ ಗುತ್ತಿಗೆ ನೌಕರರ ಸಂಘ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಆದ ವೈದ್ಯಕೀಯ, ಅರೆವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳ ಹಲವಾರು ವರ್ಷಗಳ ಬೇಡಿಕೆಗಳ ಈಡೇರಿಕೆಗಾಗಿ ಸೆ.21ರಂದು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಹಾಗೂ ಇತರೆ ಅಧಿಕಾರಿಗಳಿಗೆ ಬೇಡಿಕೆ ಈಡೇರಿಕೆ ಹಾಗೂ ಮುಷ್ಕರದ ಬಗ್ಗೆ ಮನವಿ ಸಲ್ಲಿಸಲಾಗುತ್ತಿದೆ.

ಸೆ.22ರಿಂದ ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ, ಕೊರೋನ ಮತ್ತು ಆರ್ಥಿಕ ಹಾಗೂ ಭೌತಿಕ ವರದಿಗಳನ್ನು ಸಲ್ಲಿಸದೆ ಇರುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸೆ.24ರಿಂದ ಅನಿರ್ದಿಷಾವಧಿ ಮುಷ್ಕರ ಮಾಡಲು ತೀರ್ಮಾನಿಸಲಾಗಿದೆ. ನಮ್ಮ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸುವವರೆಗೆ ಪ್ರತಿಭಟನೆ ಮುಂದುವರೆಸಲಾಗುತ್ತದೆ ಎಂದು ಸಂಘ ತಿಳಿಸಿದೆ.

ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ, ವೈದ್ಯಕೀಯ ಇಲಾಖೆ, ಎನ್.ಆರ್.ಹೆಚ್.ಎಂ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ, ಹೊರ ಗುತ್ತಿಗೆ ನೌಕರರು ಸೆ.24ರಿಂದ ಅನಿರ್ದಿಷಾವಧಿಯವರೆಗೆ ಮುಷ್ಕರದಲ್ಲಿ ನಿರತರಾಗುವ ಕಾರಣ ರಾಜ್ಯದಲ್ಲಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News