ಕೃಷಿ ಮಸೂದೆ; ರೈತರ ಆಕ್ರೋಶದ ಬೆನ್ನಲ್ಲೇ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ

Update: 2020-09-21 17:10 GMT

ನವದೆಹಲಿ, ಸೆ.21: ಕೃಷಿಗೆ ಪ್ರೋತ್ಸಾಹ ನೀಡುವ ಮೂಲಕ ರೈತರನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್ ಗೋಧಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ 50 ರೂಪಾಯಿ ಹೆಚ್ಚಳ ಮಾಡಿದೆ. ಇದರಿಂದಾಗಿ ಪ್ರತಿ ಕ್ವಿಂಟಾಲ್ ಗೋಧಿಯ ಕನಿಷ್ಠ ಬೆಂಬಲ ಬೆಲೆ 1,975 ರೂ. ಆಗಿದೆ.

   ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಯಲ್ಲಿ ಪ್ರಕಟಿಸಿದರು.

ಸಂಸತ್ತಿನಲ್ಲಿ  ಎರಡು ಕೃಷಿ ಮಸೂದೆಗಳು ಅಂಗೀಕಾರಗೊಂಡ ನಂತರ ಉತ್ತರ ಭಾರತದಲ್ಲಿ, ಅದರಲ್ಲೂ ಪ್ರಮುಖವಾಗಿ ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಪ್ರತಿಪಕ್ಷಗಳು ಮತ್ತು ರೈತ ಸಂಘಟನೆಗಳಿಂದ ವ್ಯಾಪಕ ಪ್ರತಿಭಟನೆ ನಡೆದಿರುವ ಬೆನ್ನಲ್ಲೇ, ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವ್ಯವಹಾರ ( ಪ್ರೋತ್ಸಾಹಕ ಸೌಲಭ್ಯ ) ಮಸೂದೆ 2020 ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಹಾಗೂ ಕೃಷಿ ಸೇವೆಗಳ ಮಸೂದೆ 2020ನ್ನು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ.

   ಆರು ರಾಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆ ಅನುಮೋದನೆ ನೀಡಿದೆ. ಪ್ರತಿಪಕ್ಷಗಳ ಅಪ ಪ್ರಚಾರದ ವಿರುದ್ಧವಾಗಿ ಸರ್ಕಾರ ಯಾವಾಗಲು ಕನಿಷ್ಠ ಬೆಂಬಲ ಬೆಲೆ ಮತ್ತು ಎಪಿಎಂಸಿ ಕಾರ್ಯವಿಧಾನಗಳನ್ನು ಮುಂದುವರೆಸಲಿದೆ ಎಂದು ತೋಮರ್ ಹೇಳಿರು.

 ತೊಗರಿಬೇಳೆ, ಕಡಲೆ, ಬಾರ್ಲಿ, ಸಾಸಿವೆ ಹಾಗೂ ಕೇಸರಿ(ಸಫ್‌ಫ್ಲವರ್)ಯ ಬೆಂಬಲ ಬೆಲೆಯನ್ನೂ ಹೆಚ್ಚಿಸಲಾಗಿದೆ. ಬಾರ್ಲಿಯ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ 75 ರೂ, ಸಾಸಿವೆಯ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ 225 ರೂ. ಹೆಚ್ಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News