ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ವಿಳಂಬ ಆರೋಪ: ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್

Update: 2020-09-21 18:57 GMT

ಬೆಂಗಳೂರು, ಸೆ.21: ಸುಪ್ರೀಂಕೋರ್ಟ್ ನಿರ್ದೇಶನದಂತೆ ಹಾಲಿ ಹಾಗೂ ಮಾಜಿ ಶಾಸಕರು-ಸಂಸದರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳಲು ಮುಂದಾಗಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಮತ್ತು ನ್ಯಾ.ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ ಪಿಐಎಲ್ ಅರ್ಜಿ ದಾಖಲಿಸಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸಿದೆ. ಅರ್ಜಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ಪ್ರತಿವಾದಿಗಳನ್ನಾಗಿಸಿಸಲು ಸೂಚಿಸಿದ್ದು,  ಸೆ.23ಕ್ಕೆ ವಿಚಾರಣೆ ನಿಗದಿಯಾಗಿದೆ. ರಾಜ್ಯ ಸರಕಾರದ ಪರ ಅಡ್ವೊಕೇಟ್ ಜನರಲ್ ಅಥವಾ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಾದಿಸಬೇಕಿದೆ. ಇನ್ನು ಹೈಕೋರ್ಟ್ ಪರ ವಾದಿಸಲು ಹಿರಿಯ ವಕೀಲ ಆದಿತ್ಯ ಸೋಂಧಿ ಅವರನ್ನು ಅಮಿಕಸ್ ಕ್ಯೂರಿ ಆಗಿ ನೇಮಕ ಮಾಡಲಾಗಿದೆ.

ದೇಶದ ಎಲ್ಲ ರಾಜ್ಯಗಳಲ್ಲಿ ಸಂಸದರು ಹಾಗೂ ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ದೀರ್ಘಕಾಲದಿಂದ ವಿಚಾರಣಾ ಹಂತದಲ್ಲಿಯೇ ಉಳಿದಿವೆ. ಬಹುತೇಕ ಪ್ರಕರಣಗಳಲ್ಲಿ ತಡೆಯಾಜ್ಞೆ ಮುಂದುವರಿಯುತ್ತಲೇ ಬಂದಿದೆ ಎಂದು ಆಕ್ಷೇಪಿಸಿ ವಕೀಲ ಅಶ್ವಿನ್ ಕುಮಾರ್ ಉಪಾಧ್ಯಾಯ ಎಂಬುವರು ಸುಪ್ರೀಂಕೋರ್ಟ್‍ಗೆ ಪಿಐಎಲ್ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಎನ್.ವಿ. ರಮಣ ನೇತೃತ್ವದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ, ಸಂಸದರು-ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಸ್ತುಸ್ಥಿತಿ ಪರಾಮರ್ಶಿಸಿ ಅವುಗಳ ತ್ವರಿತ ಇತ್ಯರ್ಥಕ್ಕೆ ಕ್ರಿಯಾಯೋಜನೆ ರೂಪಿಸಬೇಕು ಮತ್ತು ಈ ವರದಿಯನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಸಬೇಕು ಎಂದು ಎಲ್ಲ ರಾಜ್ಯಗಳ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ನಿರ್ದೇಶಿಸಿದೆ. ಅದರಂತೆ ರಾಜ್ಯ ಹೈಕೋರ್ಟ್ ಈ ಕ್ರಮ ಕೈಗೊಂಡಿದೆ.

ಶಾಸಕರು ಮತ್ತು ಸಂಸದರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ-2002 ಮತ್ತಿತರ ಕಾಯ್ದೆಗಳಡಿ ಪ್ರತಿ ರಾಜ್ಯದಲ್ಲಿಯೂ ನೂರಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಗಳು ವಿಚಾರಣಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದು, ಸುಪ್ರೀಂ ಕೋರ್ಟ್ ನಿರ್ದೇಶನದನ್ವಯ ರಚನೆಯಾಗಲಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಶೇಷ ಪೀಠ ಇವುಗಳ ತ್ವರಿತ ವಿಲೇವಾರಿ ಸಂಬಂಧ ಗಮನಹರಿಸಲಿದೆ. ಪ್ರಸ್ತುತ ರಾಜ್ಯದ ಶಾಸಕರು ಮತ್ತು ಸಂಸದರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News