ಕಾರಂತ ಹುಟ್ಟೂರ ಪ್ರಶಸ್ತಿಗೆ ಎಸ್.ಎಲ್. ಭೈರಪ್ಪ ಆಯ್ಕೆ

Update: 2020-09-24 14:34 GMT

ಉಡುಪಿ, ಸೆ.24: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ನೀಡುವ 2020ನೆ ಸಾಲಿನ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಹಿರಿಯ ಸಾಹಿತಿ ನಾಡೋಜ ಡಾ.ಎಸ್.ಎಲ್.ಭೈರಪ್ಪ ಆಯ್ಕೆಯಾಗಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಯು.ಎಸ್.ಶೆಣೈ, ಭೈರಪ್ಪ ಪ್ರಶಸ್ತಿಯನ್ನು ಸ್ವೀಕರಿಸಲು ಒಪ್ಪಿಗೆ ನೀಡಿದ್ದಾರೆ. ಈ ಪ್ರಶಸ್ತಿಯನ್ನು ಕಾರಂತರ ಜನ್ಮ ದಿನವಾದ ಅ.10ರಂದು ನೀಡಲಾಗುವುದು ಎಂದು ತಿಳಿಸಿದರು.

ಕಳೆದ 15 ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡುತ್ತ ಬರುತ್ತಿದ್ದೇವೆ. ಕಾರಂತರ ಆಸಕ್ತಿ ಕ್ಷೇತ್ರವಾದ ಸಾಹಿತ್ಯ ಕ್ಷೇತ್ರದಿಂದ ಈ ಬಾರಿ ಭೈರಪ್ಪ ಅವರನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಗಣನೀಯ ಕೊಡುಗೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದರು.

ಈ ಬಾರಿ ಕಾರಂತ ಜನ್ಮ ದಿನೋತ್ಸವದ ಪ್ರಯುಕ್ತ ಆನ್‌ಲೈನ್ ಸಾಂಸ್ಕೃತಿಕ -ಸಾಹಿತ್ಯಿಕ ಸುಗ್ಗಿ ಆಲ್ಮೋರ- 2020ನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷ-ಗಾನ-ನೃತ್ಯ ವೈಭವದಂತಹ ಕಾರ್ಯಕ್ರಮವನ್ನು ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೋಟತಟ್ಟು ಗ್ರಾಪಂ ಆಡಳಿತಾಧಿಕಾರಿ ಡಾ.ಅರುಣ್ ಕುಮಾರ್ ಶೆಟ್ಟಿ, ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ ಆಚಾರ್ಯ, ಪಿಡಿಓ ಶೈಲಾ ಎಸ್.ಪೂಜಾರಿ, ಕಾರಂತ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News