'ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದೆ': ಎಸ್‍ಪಿಬಿ ನಿಧನಕ್ಕೆ ಸಿಎಂ ಸೇರಿ ಗಣ್ಯರ ಕಂಬನಿ

Update: 2020-09-25 14:17 GMT

ಬೆಂಗಳೂರು, ಸೆ. 25: ಸಂಗೀತ ಲೋಕದ ದಿಗ್ಗಜ, ಶ್ರೇಷ್ಠ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಕೇಂದ್ರ ಸಚಿವ ಎಸ್ಸೆಂ ಕೃಷ್ಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜ್ಯ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಸಂಗೀತ ಕ್ಷೇತ್ರದ ಕೊಂಡಿ: ಚಲನಚಿತ್ರ ರಂಗದ ಶ್ರೇಷ್ಠ ಗಾಯಕರಾಗಿದ್ದ ಬಾಲಸುಬ್ರಹ್ಮಣ್ಯಂ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಮರಿಸಿದ್ದಾರೆ.

ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು. ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಾಂಸ್ಕೃತಿಕ ಲೋಕಕ್ಕೆ ನಷ್ಟ: ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಶೋಕ ವ್ಯಕ್ತಪಡಿಸಿದ್ದಾರೆ.

ಹಾಡು ಕೇಳಿ ಬೆಳೆದಿದ್ದೇನೆ: `ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೋನ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ ಅವರ ಆರೋಗ್ಯದ ಬಗ್ಗೆ ಚಿಂತೆ ಇತ್ತು. ಲಕ್ಷಾಂತರ ಅಭಿಮಾನಿಗಳು ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಆ ಯಮ ನಿಷ್ಕರುಣಿ. ಹೀಗಾಗಿ ನಮ್ಮ ಪ್ರಾರ್ಥನೆ ಫಲಿಸಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

'ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಬಾಲಸುಬ್ರಹ್ಮಣ್ಯಂ ತಮ್ಮ ಕಂಠಸಿರಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಹಾಡುಗಳನ್ನು ಕೇಳಿ ನಾವು ಬೆಳೆದಿದ್ದೇವೆ. ಅವರ ಸಾಧನೆಗೆ ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ 6 ಬಾರಿ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿವೆ ಎಂದು ಶಿವಕುಮಾರ್ ಸ್ಮರಿಸಿಕೊಂಡಿದ್ದಾರೆ.

ತಮ್ಮ ಸರಳತೆ, ವಿನಯತೆಯಿಂದಲೂ ಅಭಿಮಾನಿಗಳ ಮನಗೆದ್ದಿದ್ದ ಎಸ್‍ಪಿಬಿ ಅವರ ನಿಧನದಿಂದ ಸಿನಿಮಾ ಸಂಗೀತ ಕ್ಷೇತ್ರದಲ್ಲಿ ಒಂದು ಅದ್ಭುತ ಯುಗವೇ ಅಂತ್ಯವಾದಂತಾಗಿದೆ. ಅವರ ಮುಗಿಲೆತ್ತರದ ಸಾಧನೆ ಹಾಗೂ ಹಾಡುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತವಾಗಿ ಇರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಭಗವಂತನ ದರ್ಶನವಾದಷ್ಟು ಸಂತೋಷ: `ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ತಮ್ಮ ಗಾಯಕದ ಮೂಲಕ ಕೇಳುಗರನ್ನು ಬೇರೆ ಪ್ರಪಂಚಕ್ಕೆ ಕೊಂಡೊಯ್ಯ ಬಲ್ಲ ಶಕ್ತಿ ಅವರ ಕಂಠದಲ್ಲಿತ್ತು. ಭಕ್ತಿ ಪ್ರಧಾನ ಗೀತೆಗಳಿಗೆ ಅವರು ಭಾವ ತುಂಬಿ ಹಾಡುವುದನ್ನು ಕೇಳುತ್ತಿದ್ದರೆ ಭಗವಂತನ ದರ್ಶನವಾದಷ್ಟು ಸಂತೋಷವಾಗುತ್ತಿತ್ತು. ಶ್ರೀಯುತರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ' ಎಂದು ಮಾಜಿ ಕೇಂದ್ರ ಸಚಿವ ಎಸ್ಸೆಂ ಕೃಷ್ಣ ಅವರು ನೆನಪು ಮಾಡಿಕೊಂಡಿದ್ದಾರೆ.

ಸಂಗೀತ ಲೋಕದಲ್ಲಿ ಶೂನ್ಯ: ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಕನ್ನಡ ಸೇರಿ 16ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದ ಎಸ್ಪಿಬಿ ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅನುಕರಣೀಯ. ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ. ಕೊರೋನ ಸೋಂಕಿನಿಂದ ಎಸ್ಪಿಬಿ ಅವರು ಚೇತರಿಸಿಕೊಳ್ಳಲಾಗದೆ ಜೀವ ತೆತ್ತಿದ್ದು ಅತ್ಯಂತ ದುರ್ದೈವದ ಸಂಗತಿ. ಬಾಲಸುಬ್ರಹ್ಮಣ್ಯಂ ಗಾನಸುಧೆಯ ಮೋಡಿಗೆ ಒಳಗಾದವರಲ್ಲಿ ನಾನೂ ಒಬ್ಬ. ಮರುಜನ್ಮ ಎಂಬುದಿದ್ದರೆ ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್ಪಿಬಿಯವರ ಮಾತು ಈಗಲೂ ಕಿವಿಯಲ್ಲಿ ಅನುರಣಿಸುತ್ತಿದೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಡಾ.ಅಶ್ವತ್ಥ ನಾರಾಯಣ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಚಿವರಾದ ರಮೇಶ್ ಜಾರಕಿಹೊಳಿ, ಬೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್ ಸೇರಿದಂತೆ ರಾಜಕೀಯ ಹಾಗೂ ಚಿತ್ರರಂಗದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News