ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯ ಹಿಂದೆ ಕೋಟ್ಯಂತರ ರೂ. ಹಗರಣ: ಸಿದ್ದರಾಮಯ್ಯ ಆರೋಪ

Update: 2020-09-26 12:28 GMT

ಬೆಂಗಳೂರು, ಸೆ.26: ಭೂ ಸುಧಾರಣೆ ಕಾಯ್ದೆಯ ಉಲ್ಲಂಘನೆ ಮಾಡಿರುವ ಅಂದಾಜು 60 ಸಾವಿರ ಎಕರೆ ಜಮೀನು ಒಳಗೊಂಡಿರುವ 13,814 ಪ್ರಕರಣಗಳು ರಾಜ್ಯದ ನ್ಯಾಯಾಲಯದಲ್ಲಿವೆ. ಪ್ರಸ್ತಾಪಿತ ತಿದ್ದುಪಡಿಯಿಂದ ಈ ಎಲ್ಲ ಪ್ರಕರಣಗಳು ರದ್ದಾಗಿ ಅಕ್ರಮಗಳೆಲ್ಲ ಸಕ್ರಮವಾಗಲಿವೆ. ಈ ಭೂಗಳ್ಳರನ್ನು ರಕ್ಷಿಸಲಿಕ್ಕಾಗಿಯೇ ತಿದ್ದುಪಡಿ ತರಲಾಗಿದೆ. ಇದರ ಹಿಂದೆ ಕೋಟ್ಯಂತರ ರೂಪಾಯಿಗಳ ಹಗರಣ ಇದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.

ಶನಿವಾರ ವಿಧಾನಸಭೆಯಲ್ಲಿ ನಡೆದ ಕರ್ನಾಟಕ ಭೂಸುಧಾರಣೆಗಳ ವಿಧೇಯಕ ಮಂಡನೆ ಚರ್ಚೆಯಲ್ಲಿ ಮಾತನಾಡಿದ ಅವರು, ಭೂ ಸುಧಾರಣೆ ಕಾಯ್ದೆ ಉಲ್ಲಂಘನೆಯ 13,814 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಭೂಮಿಗೆ ಚಿನ್ನದ ಬೆಲೆ ಇರುವ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿದೆ. ಈ ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಶಾಮೀಲಾಗಿ ಸರಕಾರ ಈ ತಿದ್ದುಪಡಿ ತಂದಿದೆ. ಅಷ್ಟೇ ಅಲ್ಲದೆ, ಭೂ ಸುಧಾರಣೆ ತಿದ್ದುಪಡಿಯ ಹಿಂದೆ ಕೋಟ್ಯಂತರ ರೂಪಾಯಿಗಳ ಹಗರಣ ಇದೆ ಎಂದರು.

ಈ ಭೂ ಸುಧಾರಣಾ ತಿದ್ದುಪಡಿಯಿಂದ ಕೃಷಿಗೇನು ತೊಂದರೆಯಾಗಲಾರದು ಎಂದು ಹೇಳುತ್ತೀರಲ್ಲಾ, ಕೃಷಿಯೇತರ ಬಳಕೆಗೆ ಕೃಷಿ ಭೂಮಿಯನ್ನು ಬಳಸಿಕೊಳ್ಳಬಾರದೆಂಬ ನಿರ್ಬಂಧವೇನಾದರೂ ತಿದ್ದುಪಡಿಯಲ್ಲಿದೆಯೇ ? ಏಕೆ ಅದನ್ನು ಸೇರಿಸಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.

ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಇಲ್ಲ ಎಂದು ಆಪಾದಿಸಿದರು.

ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ತಂದು ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು, ರಾಜ್ಯ ಬಿಜೆಪಿ ಸರಕಾರ ಉಳ್ಳವನನ್ನೇ ಭೂ ಒಡೆಯನನ್ನಾಗಿ ಮಾಡಲು ಹೊರಟಿದೆ. ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದಿರುವ ಕೊನೆಯ ಮೊಳೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೃಷಿ ಭೂಮಿ ಖರೀದಿಗೆ ಆದಾಯದ ಮಿತಿಯ ಸೆಕ್ಷನ್ 79ಎ, ಕೃಷಿಯೇತರರಿಗೆ ಭೂಮಿ ಖರೀದಿ ನಿಷೇಧಿಸಿದ್ದ ಸೆಕ್ಷನ್ 79ಬಿ, ಸುಳ್ಳು ಪ್ರಮಾಣ ಪತ್ರಕ್ಕೆ ದಂಡ ವಿಧಿಸುವ ಸೆಕ್ಷನ್ 79 ಸಿ, ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ನಿಷೇಧಿಸಿದ್ದ ಸೆಕ್ಷನ್ 80, ಗರಿಷ್ಠ ಭೂಮಿತಿಯ ಸೆಕ್ಷನ್ 63ರ ರದ್ಧತಿ ಭೂತಾಯಿಗೆ ಬಗೆವ ದ್ರೋಹ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭೂ ಸುಧಾರಣೆ ಕಾಯ್ದೆಯ ಉಲ್ಲಂಘನೆ ಮಾಡಿರುವ ಅಂದಾಜು 60 ಸಾವಿರ ಎಕರೆ ಜಮೀನು ಒಳಗೊಂಡಿರುವ 13,814 ಪ್ರಕರಣಗಳು ರಾಜ್ಯದ ನ್ಯಾಯಾಲಯದಲ್ಲಿವೆ. ಪ್ರಸ್ತಾಪಿತ ತಿದ್ದುಪಡಿಯಿಂದ ಈ ಎಲ್ಲ ಪ್ರಕರಣಗಳು ರದ್ದಾಗಿ ಅಕ್ರಮಗಳೆಲ್ಲ ಸಕ್ರಮವಾಗಲಿವೆ. ಈ ಭೂಗಳ್ಳರನ್ನು ರಕ್ಷಿಸಲಿಕ್ಕಾಗಿಯೇ ತಿದ್ದುಪಡಿ ತರಲಾಗಿದೆ ಎಂದರು.

ಲಂಚಕ್ಕೆ ಕಡಿವಾಣ ಹಾಕಿ: ಭೂ ಸುಧಾರಣಾ ಕಾಯ್ದೆಯಿಂದಾಗಿ ಭ್ರಷ್ಟಾಚಾರ ಹೆಚ್ಚಾಗಿದೆ. ಅಧಿಕಾರಿಗಳು ಲಂಚ ಹೊಡೆಯಲು ಅನುಕೂಲವಾಗಿದೆ ಎಂದು ಸರಕಾರ ಹೇಳುತ್ತಿದೆ. ಆದರೆ, ಲಂಚ ಎಲ್ಲಿ ಇಲ್ಲ ಎಂದು ಪ್ರಶ್ನಿಸಿದ ಅವರು, ತಹಶೀಲ್ದಾರ್, ಪೊಲೀಸ್, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಲಂಚ ಇಲ್ಲವೇ. ನಿರ್ಮೂಲನೆ ಮಾಡಬೇಕಾಗಿರುವುದು ಲಂಚವನ್ನೇ ಅಥವಾ ಕಾನೂನನ್ನೇ? ಅಲ್ಲದೆ, ಅಧಿಕಾರಿಗಳು ಲಂಚಕೋರರಾಗಿದ್ದಾರೆ ಎಂದರೆ ಸರಕಾರ ಅವರನ್ನು ನಿಯಂತ್ರಿಸಲು ವಿಫಲವಾಗಿದೆ, ಇಲ್ಲ ಸರಕಾರವೇ ಲಂಚಕೋರರ ಜೊತೆ ಶಾಮೀಲಾಗಿದೆ ಎಂದರ್ಥವಲ್ಲವೇ. ಇದನ್ನೂ ಸಮರ್ಥಿಸಿಕೊಳ್ಳಲು ನಾಚಿಕೆ ಆಗುವುದಿಲ್ವೇ ಎಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ಸಿದ್ದರಾಮಯ್ಯ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News