ಕಾರ್ಪೋರೇಟ್ ಕಂಪೆನಿಗಳ ಪರವಾಗಿರುವ ಮೋದಿ- ಬಿಎಸ್‍ವೈ ಸರಕಾರ: ರಣದೀಪ್ ಸುರ್ಜೇವಾಲ

Update: 2020-09-27 12:24 GMT

ಬೆಂಗಳೂರು, ಸೆ.27: ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳು ರೈತರ ಪಾಲಿಗೆ ಮರಣಶಾಸನವಾಗಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಕಾರ್ಪೋರೇಟ್ ಕಂಪೆನಿಗಳ ಪರವಾಗಿ ನಡೆದುಕೊಳ್ಳುತ್ತಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.

ರವಿವಾರ ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸದಾ ರೈತರ ಪರವಾಗಿದ್ದು, ಬಿಜೆಪಿ ಸರಕಾರಗಳು ಜಾರಿಗೆ ತಂದಿರುವ ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ನಾವು ವಿರೋಧಿಸುತ್ತೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರಮಟ್ಟದಲ್ಲಿ ಬೆಂಬಲ ನೀಡಬೇಕು. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಿನ್ನೆ ಸದನದಲ್ಲಿ ಸವಾಲು ಪ್ರತಿ ಸವಾಲುಗಳು ನೋಡಿದ್ದೇವೆ. ಮುಂದಿನ ನಡೆ ಬಗ್ಗೆ ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News