ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಿ.ಟಿ.ರವಿ

Update: 2020-09-27 13:26 GMT

ಬೆಂಗಳೂರು, ಸೆ.27: ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ, ತಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ತನಗೆ ಸಿಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕರೆ ಮಾಡಿ, ಹೊಸ ಜವಾಬ್ದಾರಿ ವಹಿಸಿಕೊಳ್ಳುವ ಸಂಬಂಧ ಅಭಿಪ್ರಾಯ ಕೇಳಿದರು. ತಕ್ಷಣವೆ ಒಪ್ಪಿಗೆ ಸೂಚಿಸಿದೆ ಎಂದರು.

ರಾಷ್ಟ್ರದಲ್ಲಿ ಪಕ್ಷ ತನಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸುತ್ತೇನೆ. ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವಿದೆ. ಆದುದರಿಂದ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಾಗಿದ್ದೇನೆ. ನಮ್ಮ ರಾಜ್ಯವನ್ನು ಕೇಂದ್ರೀಕೃತ ಮಾಡಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಸಿ.ಟಿ.ರವಿ ಹೇಳಿದರು.

ರೈತರು ಕೃಷಿ ವಿಧೇಯಕಗಳನ್ನು ವಿರೋಧಿಸಿ ಕರ್ನಾಟಕ ಬಂದ್ ಮಾಡುವುದು ಸರಿಯಲ್ಲ. ಅವರು ರಾಜಕೀಯವಾದ ಪ್ರಚೋದನೆಗಳಿಗೆ ಒಳಗಾಗದೆ, ಈ ವಿಧೇಯಕಗಳ ಮಹತ್ವವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ರೈತರ ಮನೆ ಬಾಗಿಲಿಗೆ ವ್ಯಾಪಾರಿಗಳು ಬರುತ್ತಾರೆ. ಅವರು ಬೆಳೆದಂತಹ ಬೆಳೆಗಳಿಗೆ ನ್ಯಾಯಯುತವಾದ ಬೆಲೆ ಸಿಗುತ್ತದೆ. ಪ್ರತಿಪಕ್ಷ ಕಾಂಗ್ರೆಸ್ 2019ರ ಲೋಕಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಯನ್ನು ಪ್ರಸ್ತಾಪಿಸಿದೆ. ಆದರೆ, ಈಗ ಯಾಕೆ ವಿರೋಧ ಮಾಡುತ್ತಿದೆ ಅನ್ನೋದು ಗೊತ್ತಾಗುತ್ತಿಲ್ಲ ಎಂದು ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News