ಸಿದ್ದಾಪುರ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಉಸ್ಮಾನ್ ಹಾಜಿ ನಿಧನ

Update: 2020-09-28 16:35 GMT

ಮಡಿಕೇರಿ, ಸೆ.28: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿದ್ದಾಪುರ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಉಸ್ಮಾನ್ ಹಾಜಿ (80) ನಿಧನರಾಗಿದ್ದಾರೆ. ಸಿದ್ದಾಪುರದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. 

ಕಳೆದ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಇವರು, ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಮತ್ತು ಡಿಸಿಸಿ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಹಾಲಿ ಡಿಸಿಸಿ ಸಮಿತಿಯ ವಿಶೇಷ ಆಹ್ವಾನಿತರಾಗಿದ್ದಾರೆ. ಕಳೆದ 36 ವರ್ಷಗಳಿಂದ ಸಿದ್ದಾಪುರ ಮುಸ್ಲಿಂ ಜಮಾಅತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಏಳು ಗಂಡು, ನಾಲ್ಕು ಹೆಣ್ಣು ಮಕ್ಕಳನ್ನು ಹಾಗೂ ಪತ್ನಿಯನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 

ಸಂತಾಪ: ಉಸ್ಮಾನ್ ಹಾಜಿ ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ಡಿಸಿಸಿ ಅಧ್ಯಕ್ಷ ಕೆ.ಕೆ ಮಂಜುನಾಥ್ ಕುಮಾರ್, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್ ಪೊನ್ನಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ ಗಣೇಶ್, ಎಸ್.ಡಿ.ಪಿ.ಐ ಪಕ್ಷದ ಅಮೀನ್ ಮೊಹಿಸಿನ್, ಎಸ್.ಎನ್.ಡಿ.ಪಿ ಜಿಲ್ಲಾಧ್ಯಕ್ಷ ವಿ.ಕೆ ಲೋಕೇಶ್, ಕಾಂಗ್ರೆಸ್ ಮುಖಂಡ ವಿ.ಪಿ ಶಶಿಧರ್, ಟಿ.ಪಿ ರಮೇಶ್, ಎಂ.ಎಸ್ ವೆಂಕಟೇಶ್, ಪಿ.ಎಫ್.ಐ ಯ ಹ್ಯಾರಿಸ್, ಸಿಪಿಎಂ ಪಕ್ಷದ ಮುಖಂಡ ಪಿ.ಆರ್ ಭರತ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News