ಕೊರೋನ ನಿಯಮ ಉಲ್ಲಂಘನೆ: ದಂಡ ಪ್ರಮಾಣ ಹೆಚ್ಚಳಕ್ಕೆ ಬಿಬಿಎಂಪಿ ಚಿಂತನೆ

Update: 2020-09-28 16:42 GMT

ಬೆಂಗಳೂರು, ಸೆ.28: ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ತಡೆಗೆ ಅಳವಡಿಸಿಕೊಳ್ಳಲಾಗಿರುವ ನಿಯಮಗಳನ್ನು ಸಾರ್ವಜನಿಕರು ಉಲ್ಲಂಘನೆ ಮಾಡುತ್ತಿದ್ದು, ದಂಡದ ಪ್ರಮಾಣ ಹೆಚ್ಚಳ ಮಾಡಲು ಪಾಲಿಕೆ ಚಿಂತನೆ ನಡೆಸಿದೆ.

ಸಾರ್ವಜನಿಕರು ಮಾಸ್ಕ್ ಧರಿಸದೆ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ, ದಂಡದ ಪ್ರಮಾಣವನ್ನು 200 ರೂ.ನಿಂದ ಒಂದು ಸಾವಿರ ರೂ.ಗೆ ಹೆಚ್ಚಳ ಮಾಡುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಈ ಕುರಿತು ಪಾಲಿಕೆಯ 198 ವಾರ್ಡ್‍ಗಳ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದ ಆಯುಕ್ತರು, ಅನ್‍ಲಾಕ್ ಬಳಿಕ ಸಾರ್ವಜನಿಕರು ಮುಂಜಾಗ್ರತ ಕ್ರಮದಲ್ಲಿ ಲೋಪವೆಸಗುತ್ತಿದ್ದಾರೆ. ಇದು ಸೋಂಕು ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಮಾಸ್ಕ್ ಧರಿಸದೆ ಹಾಗೂ ಸುರಕ್ಷಿತ ಅಂತರ ಕಾಪಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸುವವರಿಗೆ ತಲಾ ಸಾವಿರ ರೂ. ದಂಡ ವಿಧಿಸುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರಕಾರ ಅನುಮತಿ ನೀಡಿದರೆ, ದಂಡ ಪ್ರಮಾಣ ಹೆಚ್ಚಿಸಲಾಗುವುದು ಎಂದರು.

ಇತ್ತೀಚೆಗೆ ನಗರದಲ್ಲಿ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದ್ದು, ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಶೇ.85 ಹಾಸಿಗೆಗಳು ಭರ್ತಿಯಾಗಿವೆ. ನಗರದ 350 ಖಾಸಗಿ ಆಸ್ಪತ್ರೆಗಳು ಈಗಾಗಲೇ ಶೇ.50 ಹಾಸಿಗೆಯನ್ನು ಪಾಲಿಕೆಗೆ ಹಸ್ತಾಂತರಿಸಿವೆ. ಇನ್ನೂ ಶೇ.50 ಹಾಸಿಗೆ ನೀಡದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

180 ಠಾಣಾ ಸಿಬ್ಬಂದಿಗೆ ಅಧಿಕಾರ: ಮಾಸ್ಕ್ ಧರಿಸದ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳದವರ ಮೇಲೆ ದಂಡ ವಿಧಿಸುವ ಅಧಿಕಾರವನ್ನು ಪೊಲೀಸ್ ಸಿಬ್ಬಂದಿಗೂ ನೀಡಲು ತೀರ್ಮಾನಿಸಲಾಗಿದೆ. ಸದ್ಯದಲ್ಲಿಯೇ ದಂಡ ವಿಧಿಸುವುದಕ್ಕೆ ನಗರದ 180 ಠಾಣೆಗಳ ಪೊಲೀಸ್ ಸಿಬ್ಬಂದಿಗೆ ಯಂತ್ರಗಳನ್ನು ನೀಡಲಾಗುವುದು. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಕೋವಿಡ್ ಸೋಂಕು ಪರೀಕ್ಷೆ ಕುರಿತು ವದಂತಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಕೋವಿಡ್ ಜಾಗೃತಿಗೆ ಮನವಿ: ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ನಗರದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ಇಲ್ಲ. ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಕಾರ್ಯಕ್ರಮ ಸೇರಿದಂತೆ ವಿಶೇಷ ಕಾರ್ಯಕ್ರಮ ರೂಪಿಸಲು ಹಾಗೂ ಆರೋಗ್ಯ ಸಮಸ್ಯೆ ಇರುವವರಿಗೆ ಶೀಘ್ರ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸ್ಥಳೀಯ ನಿವಾಸಿಗಳಕೆ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮಂಜುನಾಥ್ ಪ್ರಸಾದ್ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News