ಶಿರಾ, ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ ಉಪಚುನಾವಣೆ ಘೋಷಣೆ: ನ.3ರಂದು ಮತದಾನ

Update: 2020-09-29 11:57 GMT

ಬೆಂಗಳೂರು, ಸೆ. 29: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆ ಮಾಡಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎರಡೂ ಕ್ಷೇತ್ರಗಳಿಗೆ ನವೆಂಬರ್ 3ಕ್ಕೆ ಮತದಾನ ನಡೆಯಲಿದೆ ಎಂದು ಪ್ರಕಟಿಸಿದೆ.

ಎರಡೂ ಕ್ಷೇತ್ರಗಳಿಗೆ ಅಕ್ಟೋಬರ್ 9ರಿಂದ ಅಧಿಸೂಚನೆ ಹೊರಬೀಳಲಿದ್ದು, ಅ.16ಕ್ಕೆ ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಅ.17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.19ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ನವೆಂಬರ್ 3ರಂದು ಮತದಾನ, ನ.10ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಘೋಷಿಸಿದೆ.

ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ ಬಿ.ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರ ಮತ್ತು ಮುನಿರತ್ನ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ.

ಕೋವಿಡ್-19 ಹಿನ್ನೆಲೆಯಲ್ಲಿ ಸೂಕ್ತ ಮುನ್ನಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಉಪಚುನಾವಣೆ ನಡೆಸಬೇಕು ಎಂದು ಆಯೋಗ ಸೂಚನೆ ನೀಡಿದೆ. ಮತದಾರರ ಪಟ್ಟಿಯನ್ನು ಮತ್ತು ಉಪಚುನಾವಣೆ ನಡೆಸಲು ಅಗತ್ಯವಾದಷ್ಟು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಚುನಾವಣಾ ಆಯೋಗ ಇದೇ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳು ವಿವಿಧ ಕಾರಣಗಳಿಗಾಗಿ ತೆರವಾಗಿದ್ದವು. ಆ ಪೈಕಿ ಇದೀಗ ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಉಪ ಚುನಾವಣೆ ಪ್ರಕಟವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ಮತ್ತು ಶಾಸಕರ ನಿಧನದ ಹಿನ್ನೆಲೆಯಲ್ಲಿ ತೆರವಾಗಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಗೆ ಬಾಕಿ ಉಳಿದಿವೆ.

ಮಿನಿ ಸಮರ: ರಾಜ್ಯದಲ್ಲಿ ಎರಡು ಕ್ಷೇತ್ರಗಳ ಉಪ ಚುನಾವಣೆ ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿದೆ. ಶಿರಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಈಗಾಗಲೇ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಆದರೆ, ಬಿಜೆಪಿ, ಜೆಡಿಎಸ್ ಇನ್ನೂ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ.

ಅದೇ ರೀತಿಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರ ಮುನಿರತ್ನ ರಾಜೀನಾಮೆಯಿಂದ ತೆರವಾಗಿತ್ತು. ಈ ಮಧ್ಯೆ ಅವರ ವಿರುದ್ದ ದಾಖಲಾಗಿದ್ದ ಮತದಾರರ ಗುರುತಿನ ಚೀಟಿ ಸಂಗ್ರಹ ಪ್ರಕರಣವನ್ನೂ ಹೈಕೋರ್ಟ್ ಇತ್ಯರ್ಥಪಡಿಸಿದ್ದು, ಕ್ಷೇತ್ರದಲ್ಲಿ ಇದೀಗ ಅವರೇ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ. ಇನ್ನೂ ಕಾಂಗ್ರೆಸ್ ಹಾಗೂ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಈ ಉಪಚುನಾವಣೆ ಮೂರು ಪಕ್ಷಗಳಿಗೆ ಹೊಸ ಸವಾಲನ್ನು ತಂದೊಡ್ಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News