ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ: ಅಕ್ಟೋಬರ್ 28ಕ್ಕೆ ಮತದಾನ

Update: 2020-09-29 12:42 GMT

ಬೆಂಗಳೂರು, ಸೆ. 29: ರಾಜ್ಯ ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳು ಸೇರಿದಂತೆ ಒಟ್ಟು ನಾಲ್ಕು ಕ್ಷೇತ್ರಗಳಿಗೆ ಅಕ್ಟೋಬರ್ 28ಕ್ಕೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 1ರಿಂದ ಅಧಿಸೂಚನೆ ಹೊರಡಿಸಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಅ.8ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಉಮೇದುವಾರಿಕೆ ಹಿಂಪಡೆಯಲು ಅ.12ರಂದು ಕೊನೆಯ ದಿನವಾಗಿದ್ದು, ಅ.28ರ ಬೆಳಗ್ಗೆ 8ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ಚುನಾವಣೆ (ಮತದಾನ) ನಡೆಯಲಿದೆ.

ನ.2ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ನವೆಂಬರ್ 5ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. 2020ರ ಜೂನ್ 30ಕ್ಕೆ ಆರ್.ಚೌಡರೆಡ್ಡಿ ತೂಪಲ್ಲಿ, ಎಸ್.ವಿ.ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ತೆರವಾಗಿರುವ ಮೇಲ್ಮನೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ತಕ್ಷಣದಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ.

ಕೋವಿಡ್-19 ಮಾರ್ಗಸೂಚಿಯನ್ವಯ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬರು ಮಾಸ್ಕ್ ಧರಿಸಿರಬೇಕು, ಚುನಾವಣಾ ಕೊಠಡಿಗೆ ಪ್ರವೇಶಿಸುವ ಪ್ರತಿಯೊಬ್ಬರು ಮುನ್ನ ಥರ್ಮಲ್ ಸ್ಕ್ಯಾನಿಂಗ್ ಮಾಡಿಸಬೇಕು. ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಇದಕ್ಕೆ ಅನುಕೂಲ ಆಗುವಂತೆ ಕೊಠಡಿಗಳನ್ನು ಗುರುತಿಸಬೇಕು. ವಾಹನಗಳನ್ನು ಮಾರ್ಗಸೂಚಿ ಅನ್ವಯ ಚುನಾವಣಾ ಕಾರ್ಯಕ್ಕೆ ಬಳಸಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News