ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2020-09-29 14:05 GMT

ಬೆಂಗಳೂರು, ಸೆ.29: ಮುಂಗಾರು ಕ್ಷೀಣಿಸಿದ್ದರಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಎರಡು ದಿನಗಳಿಂದ ಮಳೆ ಪ್ರಮಾಣ ತಗ್ಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಕಳೆದೊಂದು ವಾರದಿಂದ ಮಳೆ ಕಡಿಮೆಯಾಗಿತ್ತು. ಆದರೆ, ಸೆ.29 ಮತ್ತು ಸೆ.30ರಂದು ಉತ್ತರ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಅ.1ರಿಂದ 3ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅ. 1ರವರೆಗೆ ಸಾಧಾರಣ ಮಳೆಯಾಗಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಬೆಂಗಳೂರು, ಕೋಲಾರ, ಬಳ್ಳಾರಿಯಲ್ಲಿ ಮಂಗಳವಾರದಂದು ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ. ಮಳೆಯಿಂದಾಗಿ ಹಂಪಿಯ ವಿಜಯ ವಿಠ್ಠಲ ದೇವಾಲಯದ ಐತಿಹಾಸಿಕ ಸಾಲು ಮಂಟಪ ಕುಸಿದುಬಿದ್ದಿದೆ ಎಂದು ಅವರು ತಿಳಿಸಿದ್ದಾರೆ.

ಮಳೆ ಪ್ರಮಾಣ: ಕೊಪ್ಪಳ ಜಿಲ್ಲೆಯ ಬೇವೂರಿನಲ್ಲಿ ಗರಿಷ್ಠ 5 ಸೆಂ.ಮೀ ಮಳೆಯಾಗಿದ್ದು ಬಾದಾಮಿ 4 ಸೆ.ಮೀ, ಯಲಬುರ್ಗಾ, ರಾಮದುರ್ಗ 3 ಸೆ.ಮೀ, ಕೂಡ್ಲಿಗಿ, ಹುನಗುಂದ 2 ಸೆ.ಮೀ, ವಿಜಯಪುರ, ಹರಪನಹಳ್ಳಿ, ಆಗುಂಬೆ ಹಾಗೂ ಹೊಸಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಸೆ.29ರಂದು ಹಲವೆಡೆ ಯೆಲ್ಲೋ ಅಲರ್ಟ್

ಸೆ.29ರಂದು ಬೆಂಗಳೂರು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News