ಬಾಬರಿ ಮಸೀದಿಯನ್ನು ಯಾರು ಕೆಡವಿದರು ಎಂಬ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಸಿದ್ದರಾಮಯ್ಯ

Update: 2020-09-30 13:27 GMT

ಬೆಂಗಳೂರು, ಸೆ.30: ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಾಬರಿ ಮಸೀದಿಯನ್ನು ಯಾರು ಕೆಡವಿದರು ಎಂಬ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ. ವಿಶೇಷ ನ್ಯಾಯಾಲಯವು ಸುಪ್ರೀಂ ಕೋರ್ಟ್ ಮತ್ತು ಸಾಂವಿಧಾನಿಕ ತತ್ವಗಳ 2019ರ ತೀರ್ಪನ್ನು ಪರಿಗಣಿಸಿಲ್ಲ ಎಂಬುದು ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

'ಬಾಬರಿ ಮಸೀದಿ ಧ್ವಂಸ ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ 2019ರಲ್ಲಿ ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಇದೀಗ ಸಿಬಿಐ ವಿಶೇಷ ನ್ಯಾಯಾಲಯವು ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಾಬರಿ ಮಸೀದಿಯನ್ನು ಯಾರು ಕೆಡವಿದರು ಎಂಬ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ. ಬಾಬರಿ ಮಸೀದಿ ಧ್ವಂಸ ಮಾಡಿದವರನ್ನು ಶಿಕ್ಷೆಗೊಳಪಡಿಸುವಂತೆ ಕೇಂದ್ರ ಮತ್ತು ಉತ್ತರ ಪ್ರದೇಶ ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News