ಶಾಲೆ- ಕಾಲೇಜು ಆರಂಭಿಸುವ ಬಗ್ಗೆ ಶೀಘ್ರವೇ ಸ್ಪಷ್ಟ ಮಾಹಿತಿ: ಡಿಸಿಎಂ ಅಶ್ವತ್ಥನಾರಾಯಣ

Update: 2020-10-01 11:47 GMT

ಬೆಂಗಳೂರು, ಅ.1: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿಯನ್ನು ಸರಕಾರ ನೀಡಲಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೆ ಮಾರ್ಗಸೂಚಿಯನ್ನು ನೀಡಿದೆ. ಅದರಂತೆ ಸರಕಾರ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಜತೆಗೂ ಚರ್ಚೆ ನಡೆಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದರು.

ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೆ ಸಮಸ್ಯೆ ಆಗದಂತೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡು, ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಅದರ ಮುಂದುವರಿದ ಭಾಗವಾಗಿ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಎಂದಿನಿಂದ ಹಾಜರಾಗಬೇಕು ಎಂಬ ಬಗ್ಗೆ ಸಂಬಂಧಿತರ ಜತೆ ಚರ್ಚೆ ಮಾಡಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದರು.

ಕೋವಿಡ್ ಮಾರ್ಗಸೂಚಿಯ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವೆಲ್ಲವುಗಳ ಸಾಧಕ-ಬಾಧಕಗಳನ್ನು ನೋಡಿಕೊಂಡೇ ತರಗತಿಗಳನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದರು.

ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಇಲ್ಲ: ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಕೋರ್ ಕಮಿಟಿಯು ಶೀಘ್ರದಲ್ಲೇ ಮಾಡುತ್ತದೆ. ಈ ಬಗ್ಗೆ ಪಕ್ಷದಲ್ಲಿ ಯಾವುದೆ ರೀತಿಯ ಗೊಂದಲ ಇಲ್ಲ ಎಂದು ಅಶ್ವತ್ಥ ನಾರಾಯಣ ಸ್ಪಷ್ಪಪಡಿಸಿದರು.

ರಾಜರಾಜೇಶ್ವರಿ ನಗರದಲ್ಲಿ ಮಾಜಿ ಶಾಸಕ ಮುನಿರತ್ನ ಅವರಿಗೆ ಟಿಕೆಟ್ ಕೊಡಬೇಕಾ? ಬೇಡವಾ? ಎನ್ನುವುದನ್ನು ಪಕ್ಷದ ನಾಯಕತ್ವ ನಿರ್ಧರಿಸುತ್ತದೆ. ಈ ವಿಷಯವನ್ನು ಬಹಿರಂಗವಾಗಿ ಚರ್ಚೆ ಮಾಡಲಾಗದು. ಪಕ್ಷದ ಮಟ್ಟದಲ್ಲಿ ಎಲ್ಲವೂ ಸಮಾಲೋಚನೆ ನಡೆಯುತ್ತಿದೆ. ಶೀಘ್ರದಲ್ಲೆ ಅಧಿಕೃತವಾಗಿ ಪ್ರಕಟಣೆ ಹೊರಬೀಳುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿಯೆ ಗೆಲ್ಲುತ್ತದೆ: ಕಳೆದ ಒಂದು ವರ್ಷದಿಂದ ರಾಜ್ಯ ಸರಕಾರ ಉತ್ತಮವಾಗಿ ಕೆಲಸ ಮಾಡಿದೆ. ಕೋವಿಡ್ ನಿರ್ವಹಣೆ, ನೆರೆ ಸೇರಿ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದೆ. ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ರಾಜರಾಜೇಶ್ವರಿ ನಗರ ಮತ್ತು ಶಿರಾ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷವೆ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ಚುನಾವಣೆಗೆ ಪಕ್ಷ ಉತ್ತಮವಾಗಿ ಸಿದ್ಧತೆ ಮಾಡಿಕೊಂಡಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News