ಸರಕಾರಿ ನೌಕರರ ಹೊಸ ಪಿಂಚಣಿ ಯೋಜನೆ ರದ್ದಾಗಲಿ: ಬಸವರಾಜ ಹೊರಟ್ಟಿ ಒತ್ತಾಯ

Update: 2020-10-01 13:56 GMT

ಬೆಂಗಳೂರು, ಅ.1: ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಮೂಲಕ ಏಕರೂಪ ಪಿಂಚಣಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಬೇಕೆಂದು ವಿಧಾನಪರಿಷತ್‍ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, 2006ರಿಂದ ಹೊಸದಾಗಿ ಸರಕಾರಿ ಸೇವೆ ಸೇರುವ ಸೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಇದನ್ನು ವಿರೋಧಿಸಿ ಹೋರಾಟ ಮಾಡಿದಾಗ, ಆಗಿನ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೊಸ ಪಿಂಚಣಿ ಯೋಜನೆಯನ್ನು ರದ್ದು ಪಡಿಸಲಾಗುವುದೆಂದು ಭರವಸೆ ನೀಡಿದ್ದರು.

ರಾಜ್ಯದಲ್ಲಿ ಒಟ್ಟು 7,41,048 ಸರಕಾರಿ ನೌಕರರಿದ್ದು, ಅವರಲ್ಲಿ 5,12,521 ಜನ ಹಳೆ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದು 2,28,527 ನೌಕರರು ನೂತನ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.  ಕೇಂದ್ರ ಸರಕಾರ ನೂತನ ಪಿಂಚಣಿ ಯೋಜನೆಯನ್ನು ಕಡ್ಡಾಯಗೊಳಿಸಿಲ್ಲ. ಅದು ಆಯಾ ರಾಜ್ಯ ಸರಕಾರಗಳಿಗೆ ಬಿಟ್ಟ ವಿಷಯವೆಂದು ಹೇಳಿದೆ. ಆ ಪ್ರಕಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾವು ನೀಡಿದ ಭರವಸೆಯಂತೆ ಹೊಸ ಪಿಂಚಣಿಯನ್ನು ರದ್ದು ಮಾಡುವ ಮೂಲಕ ಎಲ್ಲ ನೌಕರರಿಗೂ ಏಕರೂಪ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಅವರು ಪ್ರಕಟನೆಯ ಮೂಲಕ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News