ಹಿರಿಯ ನಾಗರಿಕರ ಮಾರ್ಗದರ್ಶನ ಸಮಾಜಕ್ಕೆ ಅತ್ಯಗತ್ಯ : ಶಾಸಕ ರಘುಪತಿ ಭಟ್

Update: 2020-10-01 14:09 GMT

ಉಡುಪಿ, ಅ.1: ಹಿರಿಯ ನಾಗರಿಕರ ಮಾರ್ಗದರ್ಶನ, ಅನುಭವ, ಸಲಹೆ ಸೂಚನೆಗಳು ಸಮಾಜಕ್ಕೆ ಅತ್ಯಗತ್ಯ. ಆದ್ದರಿಂದ ಹಿರಿಯ ನಾಗರಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಗುರುವಾರ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಜಿಲ್ಲಾ ಮಹಿಳಾಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಹಿರಿಯ ನಾಗರಿಕರ ಸಂಸ್ಥೆಗಳು ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮ ಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಇಂದಿನ ಕೋವಿಡ್ ಸಂದರ್ಭದಲ್ಲಿ ಹಿರಿಯರು ಬಹಳ ಜಾಗರೂಕತೆಯಿಂದ ಇರಬೇಕು. ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಸದೃಢವಾಗಬೇಕು. ಕೋವಿಡ್-19 ಕುರಿತ ಅಪಪ್ರಚಾರಗಳಿಗೆ ಕಿವಿಗೊಡದೆ, ಕೋವಿಡ್ ಲಕ್ಷಣಗಳಿ ದ್ದಲ್ಲಿ ಭಯ ಪಡದೆ ಪರೀಕ್ಷಿಸಿಕೊಳ್ಳಬೇಕು. ಇತ್ತೀಚಿಗೆ ಸಾರ್ವಜನಿಕರು ರೋಗ ಲಕ್ಷಣಗಳಿದ್ದರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದೆ ಇರುವುದರಿಂದ ಇತರರಿಗೂ ಅದು ಹೆಚ್ಚಿನ ಸಂಖ್ಯೆಯಲ್ಲಿ ಹರಡುತ್ತಿದೆ. ಆದ್ದರಿಂದ ಹಿರಿಯರು ತಮ್ಮ ಮನೆಯಲ್ಲಿಯೇ ಸುರಕ್ಷಿತವಾಗಿದ್ದು ಮುಂಜಾಗೃತಾ ಕ್ರಮ ಕೈಗೊಂಡು ತಮ್ಮ ಆರೋಗ್ಯದ್ತ ಗಮನ ಹರಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಹಿರಿಯ ನಾಗರಿಕರ ರಕ್ಷಣೆಗಾಗಿ ಹಲವು ಕಾನೂನುಗಳನ್ನು ರೂಪಿಸಿದ್ದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸಹಾಯವನ್ನು ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳನ್ನು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕುರಿತು ಅವರು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ವಿಶು ಶೆಟ್ಟಿ ಅಂಬಲಪಾಡಿ ಮತ್ತು ಪುಂಡಲೀಕ್ ಗಾಣಿಗ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ವಾಸುದೇವ ಕೋವಿಡ್-19 ಬಗ್ಗೆ ಹಿರಿಯ ನಾಗರಿಕರು ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಸೇವಾ ಸಿಂಧು ಜಿಲ್ಲಾ ವ್ಯವಸ್ಥಾಪಕ ಪ್ರಮೋದ್ ಎಸ್.ಆರ್. ಹಿರಿಯ ನಾಗರಿಕರ ಗುರುತಿನ ಚೀಟಿ, ಆನ್‌ಲೈನ್ ನೊಂದಣಿ ಬಗ್ಗೆ ಮಾಹಿತಿ ನೀಡಿದರು.

ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ನಗರಾಭಿವೃದ್ದಿ ಪ್ರಾಧಿಕಾರದ ಆಧ್ಯಕ್ಷ ರಾಘವೇಂದ್ರ ಕಿಣಿ, ಜಿಪಂ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಹಿರಿಯ ನಾಗರಿಕರ ಒಕ್ಕೂಟದ ಆಧ್ಯಕ್ಷ ಎ.ಪಿ ಕೊಡಂಚ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಆರ್. ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಚಂದ್ರ ನಾಯ್ಕ ಸ್ವಾಗತಿಸಿ, ಮಣಿಪಾಲ ಹೈಸ್ಕೂಲ್‌ನ ಸಹಶಿಕ್ಷಕ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.
  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News