ಶಿಕ್ಷಕರ ಕ್ಷೇತ್ರ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ

Update: 2020-10-01 17:11 GMT

ಬೆಂಗಳೂರು, ಅ.1: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಓರ್ವ ಸದಸ್ಯರನ್ನು ಚುನಾಯಿಸಲು ಅ.28ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ತಿಳಿಸಿದ್ದಾರೆ.

ಇಲ್ಲಿನ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿರುವ ಬೆಂಗಳೂರು ವಿಭಾಗದ ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು ಇಲ್ಲವೆ ಸಹಾಯಕ ಚುನಾವಣಾಧಿಕಾರಿಗಳಿಗೆ ಉಮೇದುದಾರರು ಇಲ್ಲವೆ ಅವರ ಸೂಚಕರು ನಾಮಪತ್ರಗಳನ್ನು ಸಲ್ಲಿಸಬಹುದು. ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ ಅ.8ರ ವರೆಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯ ನಡುವೆ ನಾಮಪತ್ರಗಳನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

ನಾಮಪತ್ರಗಳನ್ನು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಅ.9ರಂದು ನಡೆಯಲಿದೆ. ಅ.12ರ ವರೆಗೆ ನಾಮಪತ್ರಗಳನ್ನು ಹಿಂದಕ್ಕೆ ಪಡೆದುಕೊಳ್ಳಲು ಅವಕಾಶವಿದೆ. ಅ.28ರಂದು ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ. ನ.2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ನವೀನ್ ರಾಜ್ ಸಿಂಗ್ ತಿಳಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೆ.29ರಿಂದ ನವೆಂಬರ್ 5ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ನವೀನ್ ರಾಜ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News