ಕರ್ನಾಟಕ ಆಗ್ನೇಯ ಪದವೀಧರರ ಕೇತ್ರದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅ.8 ಕೊನೆಯ ದಿನಾಂಕ

Update: 2020-10-01 17:13 GMT

ಬೆಂಗಳೂರು, ಅ. 1: ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣಾ ಅಧಿಸೂಚನೆಯನ್ನು ಆಯೋಗವು ಹೊರಡಿಸಿದ್ದು, ನಾಮಪತ್ರ ಸಲ್ಲಿಸಲು ಅ.8ರಂದು ಕೊನೆಯ ದಿನಾಂಕವಾಗಿರುತ್ತದೆ.

ನಾಮಪತ್ರ ಪರಿಶೀಲನೆ ಅ.9ರಂದು ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅ. 12 ಕೊನೆಯ ದಿನಾಂಕವಾಗಿರುತ್ತದೆ. ಅ.28ರ ಬೆಳಗ್ಗೆ 8ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತದಾನ ನಡೆಯಲಿದೆ. ನವೆಂಬರ್ 2 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ನ.5ಕ್ಕೆ ಚುನಾವಣೆ ಮುಕ್ತಾಯವಾಗಲಿದೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಆಭ್ಯರ್ಥಿಗಳ ವಯಸ್ಸು ಭಾರತೀಯ ಸಂವಿಧಾನದ ಅನುಚ್ಚೇದ 173(ಬಿ)ರನ್ವಯ 30 ವರ್ಷಗಳ ಕಡಿಮೆ ಇರಕೂಡದು ಹಾಗೂ ಅವರು ಕರ್ನಾಟಕದ ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಾಣಾಧಿಕಾರಿ, ಸಹಾಯಕ ಮತದಾರರ ನೋಂದಾಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು.

ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅ.1ರಿಂದ ಅಕ್ಟೋಬರ್ 8ರವರೆಗೂ ಮೇಲಿನ ಅಧಿಕಾರಿಗಳ ಕಚೇರಿಯಲ್ಲಿ ಬೆಳಗೆ 11 ಗಂಟೆಯಿಂದ ಮಧ್ಯಾಹ್ನ 3ಗಂಟೆವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು ಬೆಂಗಳೂರು ವಿಭಾಗ ಬೆಂಗಳೂರು ರವರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತರ ಕಚೇರಿ, ಬೆಂಗಳೂರು ವಿಭಾಗ 2ನೆ ಮಹಡಿ ಕೆ.ಎಚ್.ರಸ್ತೆ ಶಾಂತಿನಗರ ಬೆಂಗಳೂರು 560027 ಇಲ್ಲಿಗೆ ಸಲ್ಲಿಸಬೇಕು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News