ಪತ್ರಕರ್ತರು 'ಆರೋಗ್ಯ ಕಾರ್ಡ್' ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ: ಡಾ.ಪಿ.ಎಸ್.ಹರ್ಷ

Update: 2020-10-03 15:09 GMT

ಬೆಂಗಳೂರು, ಅ. 3: ಪ್ರತಿಯೊಬ್ಬರು ಉತ್ತಮ ಆರೋಗ್ಯಕ್ಕಾಗಿ, ಸುರಕ್ಷತಾ ಕ್ರಮಗಳನ್ನು ಹೊಂದುವುದು ಅತ್ಯಗತ್ಯವಾಗಿದ್ದು, ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭವಾಗಿರುವ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಸರಕಾರದಿಂದ ಕಲ್ಪಿಸಲಾಗಿರುವ ಆರೋಗ್ಯ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಸಲಹೆ ಮಾಡಿದ್ದಾರೆ.

ಶನಿವಾರ ವಾರ್ತಾ ಇಲಾಖೆ ಕಚೇರಿಯಲ್ಲಿ ಆರೋಗ್ಯ ಕಾರ್ಡ್ ವಿತರಣೆ ಮಾಡಿ ಮಾತನಾಡಿದ ಅವರು, `ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ' ಯೋಜನೆಯಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ನೀಡಲು ರಾಜ್ಯದ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಆರೋಗ್ಯ ಚಿಕಿತ್ಸೆಗಾಗಿ ಒಂದು ಕುಟುಂಬವು ಒಂದು ವರ್ಷಕ್ಕೆ ಐದು ಲಕ್ಷ ರೂಪಾಯಿಗಳ ನೆರವು ಪಡೆಯಬಹುದಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲ ಅರ್ಹ ಪತ್ರಕರ್ತರಿಗೆ ಆಯುಷ್ಮಾನ್ ಕಾರ್ಡ್ ವಿತರಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲ ಜಿಲ್ಲಾ ಕಚೇರಿಯ ಅಧಿಕಾರಿಗಳಿಗೆ, ಸೂಚಿಸಲಾಗಿದೆ. ಅದರಂತೆ ಎಲ್ಲ ಅಧಿಕಾರಿಗಳು, ಕ್ರಮವಹಿಸಿದ್ದು, ಮಾನ್ಯತಾ ಕಾರ್ಡ್ ಹೊಂದಿರುವ, ಬಹುತೇಕ ಪತ್ರಕರ್ತರಿಗೆ ಆಯುಷ್ಮಾನ್ ಕಾರ್ಡ್‍ಗಳನ್ನು ವಿತರಿಸಲಾಗಿದೆ. ಇದಲ್ಲದೆ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಬಸ್‍ಪಾಸ್ ಸೌಲಭ್ಯ, ನಿವೃತ್ತಿ ಹೊಂದಿರುವ ಅರ್ಹ ಪತ್ರಕರ್ತರಿಗೆ ಮಾಸಾಶನ ಸೌಲಭ್ಯ ಒದಗಿಸಲಾಗುತ್ತಿದ್ದು, ಪತ್ರಕರ್ತರು ಇದರ ಪ್ರಯೋಜನ ಪಡೆಯಬೇಕೆಂದು ಅವರು ಮಾಹಿತಿ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಾದ ಕೆ.ಪಿ.ಪುಟ್ಟಸ್ವಾಮಯ್ಯ, ಎನ್.ಎಸ್.ಮಹೇಶ್, ಹೇಮಾವತಿ ಜೆ., ಪತ್ರಕರ್ತ ಪ್ರಸನ್ನಕುಮಾರ್ ಮತ್ತು ಕುಟುಂಬದವರು ಈ ವೇಳೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News