ದ.ಕ. ಜಿಲ್ಲೆಯಲ್ಲಿ ಹೊಸದಾಗಿ 293 ಮಂದಿಗೆ ಸೋಂಕು; 434 ಮಂದಿ ಕೊರೋನ ಮುಕ್ತ
ಮಂಗಳೂರು, ಅ.4: ದ.ಕ. ಜಿಲ್ಲೆಯಲ್ಲಿ ಮತ್ತೆ 293 ಮಂದಿಗೆ ಸೋಂಕು ತಗುಲಿದ್ದು, ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ, ರವಿವಾರ 434 ಮಂದಿ ಗುಣಮುಖರಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 400ರ ಆಸುಪಾಸಿನಲ್ಲಿ ಇರುತ್ತಿತ್ತು. ಕಳೆದ ಎರಡು ಮೂರು ದಿನಗಳಿಂದ 200ರ ಗಡಿಗೆ ಬಂದುನಿಂತಿದೆ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 24,312ಕ್ಕೆ ಏರಿಕೆಯಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ ಮೃತರ ಸಂಖ್ಯೆ 568ಕ್ಕೆ ತಲುಪಿದೆ.
ಕೊರೋನದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡುಬಂದಿರುವುದು ಜಿಲ್ಲೆಯ ಜನತೆಯಲ್ಲಿ ನಿಟ್ಟುಸಿರು ಬಿಡುವಂತಾಗಿದೆ. ರವಿವಾರ 434 ಮಂದಿ ಕೊರೋನಮುಕ್ತರಾಗಿ ಮನೆಗೆ ತೆರಳಿದ್ದಾರೆ. ಗುಣಮುಖರಾದವರ ಸಂಖ್ಯೆ 18,143ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 5,601 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,70,517 ಸ್ಯಾಂಪಲ್‌ಗಳನ್ನು ಪರೀಕ್ಷೆಗೊಳಪಡಿಸಲಾಗಿದೆ. ಇದರಲ್ಲಿ 1,46,205 ನೆಗೆಟಿವ್ ಕೇಸುಗಳು ದಾಖಲಾದರೆ, ಉಳಿದವು ಪಾಸಿಟಿವ್ ಆಗಿವೆ.
4,784 ಮಾಸ್ಕ್ ಉಲ್ಲಂಘನೆ ಪ್ರಕರಣ: ರಾಜ್ಯ ಮತ್ತು ಕೇಂದ್ರ ಸರಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ 4,784 ಕೇಸು ದಾಖಲಿಸಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರಿಂದ ಇಲ್ಲಿವರೆಗೆ 5,75,150 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.