ಹಾಸನ: ಯುಪಿ ಆಡಳಿತ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಂಜಿನ ಮೆರವಣಿಗೆ, ಆದಿತ್ಯನಾಥ್ ಪ್ರತಿಕೃತಿ ದಹನ

Update: 2020-10-05 16:51 GMT

ಹಾಸನ, ಅ.5: ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಖಂಡಿಸಿ, ಕೂಡಲೇ ಉತ್ತರ ಪ್ರದೇಶ ಆಡಳಿತವನ್ನು ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಿ, ಸಿಎಂ ಆದಿತ್ಯನಾಥ್ ಪ್ರತಿಕೃತಿ ದಹಿಸಲಾಯಿತು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ಹೊರಟು ಎನ್.ಆರ್. ವೃತ್ತಕ್ಕೆ ತೆರಳಿದರು. ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಲೆಂದು ಹೋದ ರಾಹುಲ್ ಗಾಂಧಿ ಮತ್ತು ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯನ್ನು ಉತ್ತರ ಪ್ರದೇಶದ ಪೊಲೀಸರು ಬಿಡದಂತೆ ತಡೆದಿರುವುದನ್ನು ಖಂಡಿಸುತ್ತೇವೆ. ಅಲ್ಲಿನ ಯೋಗಿ ಆದಿತ್ಯನಾಥ್ ಸರಕಾರ ರಾಮರಾಜ್ಯದ ಕನಸು ಕಂಡಿರುವುದು ಇದೇನಾ ಎಂದು ಪ್ರಶ್ನೆ ಮಾಡಿದರು. 

ಹಗಲಿನ ವೇಳೆಯಲ್ಲಿಯೇ ದಲಿತ ಯುವತಿಯ ಅತ್ಯಾಚಾರ, ಕೊಲೆಯಂತಹ ಘಟನೆಗಳು ನಡೆಯುತ್ತಿದೆ. ಉತ್ತರ ಪ್ರದೇಶದ ಸರ್ಕಾರವು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದೆ ಅಪರಾಧ ಎಸಗಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿಲ್ಲ. ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲದಂತಾಗಿದೆ. ಕೂಡಲೇ ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ಇದೇ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ವಕೀಲರ ಸಂಘದ ಅಧ್ಯಕ್ಷ ದೇವರಾಜೇಗೌಡ, ಬಾಗೂರು ಮಂಜೇಗೌಡ, ಮಲ್ಲಿಗೆವಾಳ್ ದೇವಪ್ಪ, ಹುಡಾ ಮಾಜಿ ಅಧ್ಯಕ್ಷ ಕೃಷ್ಣಕುಮಾರ್, ರಂಗಸ್ವಾಮಿ, ಕರ್ನಾಟಕ ಪ್ರಜಾಶಕ್ತಿ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ರಾಮಚಂದ್ರ ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News