ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರ್ಬಳಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್

Update: 2020-10-06 13:02 GMT

ಬೆಂಗಳೂರು, ಅ.6: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ನಿವಾಸಗಳ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಬಿಜೆಪಿಯ ಮುಖಂಡರು ಸಮರ್ಥಿಸಿಕೊಂಡಿದ್ದಾರೆ. ಈಡಿ, ಐಟಿ, ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನಗರದ ಶಾಂತಿನಗರದಲ್ಲಿರುವ ಪ್ರಾದೇಶಿಕ ಚುನಾವಣಾಧಿಕಾರಿ ಕಚೇರಿಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ನಾಮಪತ್ರ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ವಿರುದ್ಧ ಯಾರಾದರೂ ಮಾತನಾಡಿದರೆ ಸಾಕು ತನಿಖಾ ಸಂಸ್ಥೆಗಳಿಂದ ನೊಟೀಸ್ ಬರುತ್ತೆ. ಇದು ಖಂಡನೀಯ, ಪ್ರಜಾಪ್ರಭುತ್ವ ವಿರೋಧಿ ನಡೆ. ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲುವ ಬಗ್ಗೆ ಗುಪ್ತಚರ ವರದಿ ಬಂದಿದೆ. ಚುನಾವಣೆಯ ಸೋಲಿನ ಭಯದಿಂದ ಡಿ.ಕೆ.ಶಿವಕುಮಾರ್ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ. ಇದೊಂದು ರಾಜಕೀಯ ಪ್ರೇರಿತವಾದ ದಾಳಿ ಎಂದು ಅವರು ದೂರಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಪ್ರವೀಣ್ ಪೀಟರ್, ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಈ ಹಿಂದೆ ನಕಲಿ ಮತಗಳ ಮೂಲಕ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು. ಈಗ ಅಂತಹ ಮತಗಳನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ. ಈಗ ಅವರು ನ್ಯಾಯ ಸಮ್ಮತವಾದ ಮಾರ್ಗದಲ್ಲಿ ಗೆದ್ದು ಬರಲಿ ಎಂದು ಸವಾಲು ಹಾಕಿದರು.

ಈ ಸಂದರ್ಭದಲ್ಲಿ ಶಾಸಕರಾದ ಎನ್.ಎ.ಹಾರೀಸ್, ರಿಝ್ವಾನ್ ಅರ್ಶದ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News