ಡ್ರಗ್ಸ್ ಪ್ರಕರಣ: ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ವಿಸ್ತರಣೆ
Update: 2020-10-06 20:02 IST
ಮುಂಬೈ, ಅ.6: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರನಟಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋವಿಕ್ ಹಾಗೂ ಇತರರ ನ್ಯಾಯಾಂಗ ಬಂಧನವನ್ನು ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಅಕ್ಟೋಬರ್ 20ರವರೆಗೆ ವಿಸ್ತರಿಸಿದೆ ಎಂದು ವರದಿಯಾಗಿದೆ. ರಿಯಾ ಚಕ್ರವರ್ತಿಯನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ(ಎನ್‌ಸಿಬಿ) ಅಧಿಕಾರಿಗಳು ಸೆಪ್ಟಂಬರ್ 8ರಂದು ಬಂಧಿಸಿದ್ದರು. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಬಳಿಕ ಅವರು ಬಾಂಬೆ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಈ ಮಧ್ಯೆ, ರಿಯಾ ಚಕ್ರವರ್ತಿಯ ದೂರಿನ ಆಧಾರದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸುಶಾಂತ್ ಸಿಂಗ್ ರಜಪೂತ್ ಸಹೋದರಿಯರಾದ ಪ್ರಿಯಾಂಕಾ ಮತ್ತು ಮೀತು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್‌ನ ವಿಭಾಗೀಯ ಪೀಠ ಮುಂದೂಡಿದೆ.