ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಮೇಶ್ ಬಾಬು ನಾಮಪತ್ರ ಸಲ್ಲಿಕೆ

Update: 2020-10-07 18:15 GMT

ಬೆಂಗಳೂರು, ಅ. 7: ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರಿಗೆ ಆಗ್ನೇಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ `ಬಿ' ಫಾರಂ ನೀಡಿದ್ದು, ಬುಧವಾರ ಇಲ್ಲಿನ ಶಾಂತಿನಗರದಲ್ಲಿನ ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿಯೂ ಆಗಿರುವ ನವೀನ್ ಕುಮಾರ್ ಸಿಂಗ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಮುಖಂಡ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಯು.ಟಿ.ಖಾದರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಗೆಲುವು ನಮ್ಮದೆ: ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ನಾಮಪತ್ರ ಸಲ್ಲಿಸಲಿದ್ದು, ಪರಿಷತ್ ಚುನಾವಣೆಯಲ್ಲಿ ಕೆಲವರಿಗೆ ಜವಾಬ್ದಾರಿ ವಹಿಸಿದ್ದೇನೆ. ನಾವು ಎಂಎಲ್ಸಿ ಚುನಾವಣೆಯನ್ನೂ ಗೆಲ್ಲುತ್ತೇವೆ ಎಂದರು.

ಮಾಜಿ ಸಚಿವ ಹಾಗೂ ಜೆಡಿಎಸ್‍ನ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಸಿಬಿಐ ದಾಳಿಯಾಗಿದ್ದರಿಂದ ಅವರು ಭೇಟಿ ಮಾಡಿದ್ದರು. ನನಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಇದು ಬಿಟ್ಟು ಬೇರೆ ಏನೂ ಚರ್ಚೆಯಾಗಿಲ್ಲ. ಇದೊಂದು ವೈಯಕ್ತಿಕ ಭೇಟಿ ಅಷ್ಟೇ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು.

ತುಮಕೂರು ಜಿಲ್ಲೆಯ ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಇಂದೇ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ. ಚುನಾವಣಾ ಉಸ್ತುವಾರಿಗಳನ್ನೂ ನೇಮಕ ಮಾಡುತ್ತೇವೆ. ನಿನ್ನೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳ ಭೇಟಿ ವಿಚಾರ ಪ್ರಸ್ತಾಪಿಸಿ, ನಮ್ಮದು ಗುರು-ಶಿಷ್ಯರ ಸಂಬಂಧ. ಅದಕ್ಕೆ ಅವರು ಬಂದು ಧೈರ್ಯ ತುಂಬಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News