ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ- ಡಿಕೆಶಿ ಬಣಗಳ ಮಧ್ಯೆ ತಿಕ್ಕಾಟ: ಸಚಿವ ಈಶ್ವರಪ್ಪ

Update: 2020-10-07 16:20 GMT

ಕಲಬುರ್ಗಿ, ಅ.7: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸಲೀಸಾಗಿ ಗೆಲುವು ಸಾಧಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಕ್ಷದ ಅಭ್ಯರ್ಥಿ ಶಶಿಲ್ ನಮೋಶಿ ಅವರ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ನಮೋಶಿ ಅವರು ಆಕಸ್ಮಿಕವಾಗಿ ಸೋತಿದ್ದಾರೆ. ಈ ಬಾರಿ ಒಂಬತ್ತು ಜನ ಶಾಸಕರು, ಇಬ್ಬರು ವಿಧಾನಪರಿಷತ್ ಸದಸ್ಯರು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದು, ಪಕ್ಷದ ಅಭ್ಯರ್ಥಿಯನ್ನು ಗೆಲುವಿನ ದಡ ಮುಟ್ಟಿಸಲಿದ್ದಾರೆ.

ಈಶಾನ್ಯ ಕ್ಷೇತ್ರದ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನನ್ನನ್ನು ಸೇರಿದಂತೆ ಸಚಿವೆ ಶಶಿಕಲಾ ಜೊಲ್ಲೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರನ್ನು ನೇಮಕ ಮಾಡಿದ್ದಾರೆ. ಬುಧವಾರ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಪ್ರಚಾರ ಸಭೆಗಳು ನಿಗದಿಯಾಗಿದ್ದು, ಮುಂದಿನ ಬುಧವಾರ ಮತ್ತೆ ಜಿಲ್ಲೆಗೆ ಭೇಟಿ ನೀಡಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೇನೆ ಎಂದರು.

ಸಿದ್ದರಾಮಯ್ಯ, ಡಿಕೆಶಿ ಬಣದ ನಡುವೆ ತಿಕ್ಕಾಟ: ರಾಜ್ಯ ಕಾಂಗ್ರೆಸ್‍ನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಣಗಳ ಮಧ್ಯೆ ತಿಕ್ಕಾಟ ನಡೆದಿದೆ. ರಾಷ್ಟ್ರೀಯ ಕಾಂಗ್ರೆಸ್‍ನ 23 ಪ್ರಮುಖ ನಾಯಕರು ಸೋನಿಯಾ ಗಾಂಧಿ ಅವರ ನಾಯಕತ್ವವನ್ನು ಪ್ರಶ್ನಿಸಿ ಪತ್ರ ಬರೆದಿದ್ದಾರೆ ಎಂದರು.

ಬೈ ಎಲೆಕ್ಷನ್‍ನಲ್ಲಿ ಸೋಲುವ ಭೀತಿಯಿಂದ ಡಿಕೆಶಿ ನಿವಾಸದ ಮೇಲೆ ಬಿಜೆಪಿ ಸಿಬಿಐ ಅಸ್ತ್ರ ಪ್ರಯೋಗಿಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರಿಶುದ್ಧವಾಗಿದ್ದರೆ ಸೀತೆಯಂತೆ ಪಾವಿತ್ರ್ಯತೆಯಿಂದ ಹೊರ ಬರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು ಎಂದು ತಿಳಿಸಿದರು.

ಈ ಹಿಂದೆ ಯಡಿಯೂರಪ್ಪ ಮನೆ ಮೇಲೂ ಸಿಬಿಐ ದಾಳಿ ನಡೆದಿತ್ತು. ಆಗ ಕೇಂದ್ರದಲ್ಲಿ ಯುಪಿಎ ಸರಕಾರ ಇತ್ತು. ಆ ಟೈಮಲ್ಲಿ ಯಡಿಯೂರಪ್ಪ ತನಿಖೆ ಎದುರಿಸಿ ನಿರಪರಾಧಿಯಾಗಿ ಹೊರ ಬಂದರು. ಅದರಂತೆ ಡಿಕೆಶಿಯೂ ನಿರಪರಾಧಿ ಎಂದು ಸಾಬೀತು ಪಡಿಸಲಿ ಎಂದು ಹೇಳಿದರು.

ಬಿಜೆಪಿ ನಾಯಕರ ಬಗ್ಗೆ ಸಿದ್ದರಾಮಯ್ಯ ಏಕವಚನ ಪ್ರಯೋಗ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತು ಅವರ ಸಂಸ್ಕೃತಿ ಏನಂತ ತೋರಿಸುತ್ತೆ. ಸಿದ್ದರಾಮಯ್ಯ ವರ್ತನೆಯಿಂದಾಗಿಯೇ ಕಾಂಗ್ರೆಸ್ ನೆಲಕಚ್ಚಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡರು. ಸಿಎಂ ಹುದ್ದೆಯಿಂದ ಕೆಳಗಿಳಿದು ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದಾರೆ. ಈಗಲಾದರೂ ಬುದ್ಧಿ ಕಲಿಯಬೇಕು. ಅವರ ವರ್ತನೆ ಹೀಗೆ ಮುಂದುವರಿದರೆ ಕಾಂಗ್ರೆಸ್ ನೆಲದಿಂದಲೂ ಕೆಳಗೆ ಕುಸಿಯುತ್ತದೆ ಎಂದು ಸಚಿವ ಈಶ್ವರಪ್ಪ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News