×
Ad

ಅಧಿಕ ಕೊರೋನ ಜಿಲ್ಲೆಗಳೊಂದಿಗೆ ಸಿಎಂ ವೀಡಿಯೊ ಸಂವಾದ

Update: 2020-10-08 21:33 IST

ಉಡುಪಿ, ಅ.8: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಕೋವಿಡ್-19 ಉಲ್ಬಣಗೊಳ್ಳುತ್ತಿರುವ 11 ಜಿಲ್ಲೆಗಳ ಜಿಲ್ಲಾಡಳಿತ ದೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ವೀಡಿಯೋ ಸಂವಾದ ನಡೆಸಿದರು.

ಕೋವಿಡ್ ಸೋಂಕನ್ನು ಪತ್ತೆ ಹಚ್ಚಲು ಈ ಜಿಲ್ಲೆಗಳಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವಂತೆ ಮುಖ್ಯಮಂತ್ರಿಗಳು ಆಯಾ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದರು. ಆಗಾಗ ಹೋಮ್ ಐಸೋಲೇಷನ್‌ಗಳಲ್ಲಿ ಇರುವ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚನೆ ನೀಡಲಾಯಿತು.

ಮಾಸ್ಕ್‌ನ್ನು ಕಡ್ಡಾಯವಾಗಿ ಧರಿಸುವುದು, ಸುರಕ್ಷಿತಾ ಅಂತರವನ್ನು ಕಾಪಾಡು ವುದು ಸೇರಿದಂತೆ ಸರಕಾರದ ನಿಯಮಾವಳಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಹಾಗೂ ನಿಯಮಾವಳಿಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರಗಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿ ಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಗಳಲ್ಲಿ ಆರ್‌ಎಟಿ. ಪರೀಕ್ಷೆಗಳನ್ನು ಹೆಚ್ಚು ಮಾಡುತ್ತಿದ್ದು, ಇದನ್ನು ಕಡಿಮೆ ಮಾಡಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು ಎಂದೂ ಸೂಚನೆ ನೀಡಲಾಗಿದೆ. ಮನೆಯಲ್ಲಿ ಆರೈಕೆಯಲ್ಲಿರುವವರಿಗೆ ಟೆಲಿ ಮಾನಿಟರಿಂಗ್ ಮುಖಾಂತರ ಆರೋಗ್ಯ ತಪಾಸಣೆಯನ್ನು ಕಾಲ ಕಾಲಕ್ಕೆ ಮಾಡಿ ಆರೋಗ್ಯ ಕಿಟ್‌ಗಳನ್ನು ನೀಡಲು ಮುಖ್ಯಮಂತ್ರಿಗಳು ಸೂಚಿಸಿದರು. ಅನಿವಾರ್ಯ ಇದ್ದಲ್ಲಿ ಮಾತ್ರ ಆರ್‌ಎಟಿ. ಪರೀಕ್ಷೆ ನಡೆಸುವಂತೆ ಸೂಚಿಸಲಾಯಿತು.

ಮುಖ್ಯಮಂತ್ರಿಗಳು ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಅವರೊಂದಿಗೆ ಕಂದಾಯ ಸಚಿವ ಆರ್.ಅಶೋಕ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ದ.ಕ.ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿಗಳು ಸಹಿತ ವಿವಿಧ ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಸ್ಥರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯಿಂದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಒ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಸಹಿತ ವೈದ್ಯಕೀಯ ಇಲಾಖೆಯ ಮುಖ್ಯಸ್ಥರು ವೀಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News