ಪಿಯು ಉಪನ್ಯಾಸಕರಿಗೆ ನೇಮಕಾತಿ ಆದೇಶ ನೀಡುವಂತೆ ಸಿದ್ದರಾಮಯ್ಯ ಆಗ್ರಹ

Update: 2020-10-09 17:24 GMT

ಬೆಂಗಳೂರು, ಅ.9: ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ 2015ರಲ್ಲಿ ಅಧಿಸೂಚನೆಯಾಗಿ 2020ರ ಆ.10 ರಿಂದ ಸೆ.3ರ ಅವಧಿಯಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಲಾಗಿದೆ. 1203 ಅಭ್ಯರ್ಥಿಗಳು ಈ ಕೌನ್ಸಿಲಿಂಗ್‍ನಲ್ಲಿ ಸ್ಥಳ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಸರಕಾರದ ಯಾವುದೆ ನೇಮಕಾತಿ ಪ್ರಕ್ರಿಯೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ ಒಂದು ವರ್ಷದೊಳಗೆ ನೇಮಕಾತಿ ಆದೇಶ ನೀಡಬೇಕೆಂದು ಹೈಕೋರ್ಟ್‍ನ ಅಧಿಕೃತ ಆದೇಶವಿದ್ದರೂ ಈ ಉಪನ್ಯಾಸಕರಿಗೆ ನೇಮಕಾತಿ ಆದೇಶ ನೀಡದಿರುವುದು ಸರಕಾರಿ ಆದೇಶದ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಕೊರೋನ ಕಾರಣಕ್ಕಾಗಿ ನಗರಗಳಲ್ಲಿದ್ದ ಜನ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಹಾಗಾಗಿ ಸರಕಾರಿ ಕಾಲೇಜುಗಳಲ್ಲಿ ದಾಖಲಾತಿಯ ಪ್ರಮಾಣ ಹೆಚ್ಚಾಗಿದೆ. ಈಗಾಗಲೆ ಆನ್‍ಲೈನ್ ತರಗತಿಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಉಪನ್ಯಾಸಕರ ಕೊರತೆಯಿಂದಾಗಿ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಆದುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೆ ಈ ನೇಮಕಾತಿ ಪ್ರಕ್ರಿಯೆಯ ಕೌನ್ಸಿಲಿಂಗ್‍ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಅನುಕೂಲ ಮಾಡಿಕೊಡುವಂತೆ ಅವರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News