ಮಹಾದಾಯಿ, ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ

Update: 2020-10-10 11:38 GMT

ಬೆಂಗಳೂರು, ಅ.10: ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹಾದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ರಾಜ್ಯ ಸರಕಾರವು ಕೇಂದ್ರ ಸರಕಾರ ಮತ್ತು ಸುಪ್ರೀಂಕೋರ್ಟ್‍ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.

ಶನಿವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ದೂರವಾಣಿ ಮೂಲಕ ಮಾತನಾಡಿದ ನಂತರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಮೇಶ್ ಜಾರಕಿಹೊಳಿ, ಕೃಷ್ಣಾ ನದಿ ನೀರು ಹಂಚಿಕೆ ವಿಷಯದಲ್ಲಿ ತೆಲಂಗಾಣ ಸರಕಾರವು ಹೊಸ ತಗಾದೆ ತೆಗೆದಿದೆ ಎಂದು ತಿಳಿಸಿದ್ದಾರೆ.

ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಾಧೀಕರಣವು ಈಗಾಗಲೇ ಅಂತಿಮ ತೀರ್ಪನ್ನು ನೀಡಿದೆ. 2013ರಲ್ಲಿಯೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಅಖಂಡ ಆಂಧ್ರ ಪ್ರದೇಶ ರಾಜ್ಯಗಳಿಗೆ ನೀರು ಹಂಚಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ ಬಳಿಕ ಐತೀರ್ಪಿನ ಅಧಿಸೂಚನೆ ಹೊರಡಿಸಲು ಕೇಂದ್ರ ಸರಕಾರವೂ ನಿರ್ಧರಿಸಿದೆ. ಹೀಗಾಗಿ ನೀರು ಹಂಚಿಕೆ ವಿಷಯದಲ್ಲಿ ಹೊಸದಾಗಿ ನ್ಯಾಯಾಧೀಕರಣ ಸ್ಥಾಪಿಸಬೇಕೆಂದು ತೆಲಂಗಾಣ ಸರಕಾರದ ವಾದ ಅತಾರ್ಕಿಕವಾಗಿದೆ ಎಂದು ಅವರು ಹೇಳಿದ್ದಾರೆ.

2013ರಲ್ಲಿಯೇ ಕೃಷ್ಣಾ ನದಿ ನೀರು ಹಂಚಿಕೆ ಬಗ್ಗೆ ನ್ಯಾಯಾಧೀಕರಣ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸುವ ಸಮಯದಲ್ಲಿ ಸೀಮಾಂಧ್ರ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ನೀರು ಹಂಚಿಕೆ ಸಮಸ್ಯೆಗೆ ಕರ್ನಾಟಕವನ್ನು ಹೊಣೆಯನ್ನಾಗಿಸಬಾರದೆಂದು ಕೇಂದ್ರ ಸಚಿವರನ್ನು ಅವರು ಒತ್ತಾಯಿಸಿದ್ದಾರೆ.

ತೆಲಂಗಾಣ ರಾಜ್ಯವು ಆಂಧ್ರ ಪ್ರದೇಶದ ಭಾಗವೇ ಆಗಿದ್ದ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರನ್ನೂ ತೆಲಂಗಾಣ ರಾಜ್ಯ ಆಂಧ್ರ ಪ್ರದೇಶದ ಪಾಲಿನಿಂದಲೆ ಹಂಚಿಕೊಳ್ಳಬೇಕಿದೆ. ಈ ಬಗೆಗಿನ ಸುಪ್ರೀಂ ಕೋರ್ಟ್ ಆದೇಶಗಳೂ ಸ್ಪಷ್ಟವಾಗಿವೆ ಮತ್ತು ನ್ಯಾಯಾಧೀಕರಣ ಸ್ಥಾಪಿಸಬೇಕೆಂದು ಈ ಮೊದಲು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳೂ ವಜಾ ಆಗಿವೆ ಎಂದು ಅವರು ತಿಳಿಸಿದ್ದಾರೆ.

ಈ ಎಲ್ಲ ಕಾರಣಗಳಿಂದ ಕೃಷ್ಣಾ ನದಿ ನೀರನ್ನು ಹಂಚಿಕೊಳ್ಳಬೇಕಾಗಿರುವ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಸರಕಾರಗಳು ಪರಸ್ಪರ ಪರಿಹರಿಸಿಕೊಳ್ಳಬೇಕೆ ವಿನಃ ಹೊಸ ನ್ಯಾಯಾಧೀಕರಣ ಸ್ಥಾಪನೆ ಬೇಡಿಕೆ ಸಮರ್ಥನೀಯವಲ್ಲ ಎಂದು ರಮೇಶ್ ಜಾರಕಿಹೊಳಿ ಕೇಂದ್ರ ಜಲಶಕ್ತಿ ಸಚಿವರ ಎದುರು ವಾದ ಮಂಡಿಸಿದ್ದಾರೆ.

ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳುವುದು ನಮ್ಮ ಆದ್ಯ ಹಕ್ಕು ಎಂದು ಪ್ರತಿಪಾದಿಸಿರುವ ರಮೇಶ್ ಜಾರಕಿಹೊಳಿ, ಅದಕ್ಕಾಗಿ ಕಾನೂನು ಮತ್ತು ರಾಜಕೀಯ ಒತ್ತಡವನ್ನು ಹೇರುವ ಮೂಲಕ ರಾಜ್ಯಕ್ಕೆ ದಕ್ಕಬೇಕಿರುವ ಅರ್ಹ ಪಾಲನ್ನು ಪಡೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮಹಾದಾಯಿ ನದಿ ನೀರು ಹಂಚಿಕೆ ಕುರಿತು ಈಗಾಗಲೇ ನ್ಯಾಯಾಧೀಕರಣವು ಐತೀರ್ಪು ನೀಡಿದ್ದು, ಕೇಂದ್ರ ಸರಕಾರವೂ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಿದೆ. ಈ ಸಂದರ್ಭದಲ್ಲಿ ಗೋವಾ ರಾಜ್ಯ ಸರಕಾರವು ಸುಪ್ರೀಂ ಕೋರ್ಟ್‍ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವುದು ಹಾಸ್ಯಾಸ್ಪದವಾಗಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಮಹಾದಾಯಿ ಯೋಜನೆಯ ಅನುಷ್ಠಾನದ ವಿಷಯವು ಈಗಾಗಲೇ ತಾರ್ಕಿಕವಾಗಿ ಅಂತ್ಯವಾಗಿದೆ. ಅರಣ್ಯ ಇಲಾಖೆ ಅನುಮೋದನೆ ಮಾತ್ರ ಬಾಕಿ ಇದ್ದು, ಇಂತಹ ಸಂದರ್ಭದಲ್ಲಿ ನೆರೆಯ ರಾಜ್ಯ ಗೋವಾ ಸುಖಾ ಸುಮ್ಮನೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ರಾಜ್ಯ ಸರಕಾರವು ಇದನ್ನು ನ್ಯಾಯಾಲಯದಲ್ಲಿ ಸಮರ್ಥವಾಗಿ ಎದುರಿಸಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಮಹಾದಾಯಿ ನೀರು ಹಂಚಿಕೆಗೆ ಸಂಬಂಧಿಸಿ, ಗೋವಾ ಮುಖ್ಯಮಂತ್ರಿ ಬಿಡುಗಡೆ ಮಾಡಿರುವ ಛಾಯಾಚಿತ್ರ ಮತ್ತು ವಿಡಿಯೋಗಳು ಅವರೇ ಸೃಷ್ಟಿಸಿರುವ ದಾಖಲೆಗಳಷ್ಟೇ, ಮಹಾದಾಯಿ ಮತ್ತು ಮಲಪ್ರಭಾ ನದಿ ನಡುವೆ ಪ್ರಬಲ ಗೋಡೆ ನಿರ್ಮಿಸಲಾಗಿದೆ. ಮಹದಾಯಿ ನದಿಯ ಒಂದು ಹನಿ ನೀರೂ ಮಲಪ್ರಭಾ ನದಿ ಸೇರಿಲ್ಲ, ಇಂತಹ ಸುಳ್ಳು ದಾಖಲೆಗಳನ್ನು ಸುಪ್ರೀಂ ಕೋರ್ಟ್ ಸಹ ನಂಬುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಯೋಜನೆ ಸಂಬಂಧ ಕರ್ನಾಟಕ ಮತ್ತು ಗೋವಾ ರಾಜ್ಯಗಳ ನೀರಾವರಿ ಇಲಾಖೆಯ ಉನ್ನತ ಅಧಿಕಾರಿಗಳ ಸಮಿತಿಯೊಂದು ಅಸ್ತಿತ್ವದಲ್ಲಿ ಇದ್ದು, ಈ ಸಮಿತಿಯಿಂದ ವಾಸ್ತವ ಸ್ಥಿತಿಯ ಮಾಹಿತಿ ಪಡೆದುಕೊಳ್ಳಲಾಗಿದೆ. ಅಕ್ರಮವಾಗಿ ಮಹಾದಾಯಿ ಹರಿವನ್ನು ತಿರುಗಿಸಿದ್ದೇವೆ ಎಂಬ ಗೋವಾ ರಾಜ್ಯದ ವಾದವನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಮಹಾದಾಯಿ ಯೋಜನೆ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದು, ಈ ಯೋಜನೆ ಜಾರಿ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಬಿಜೆಪಿ ಸರಕಾರ ಮಹಾದಾಯಿ ಯೋಜನೆ ಜಾರಿ ಮಾಡಿಯೇ ಸಿದ್ಧ ಎಂದು ರಮೇಶ್ ಜಾರಕಿಹೊಳಿ ಪುನರುಚ್ಛರಿಸಿದ್ದಾರೆ.

ಮಹಾದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿಚಾರದಲ್ಲಿ ನೆರೆ ರಾಜ್ಯಗಳು ವಿವಾದ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಜಲಶಕ್ತಿ ಸಚಿವರಿಗೆ ತುರ್ತು ಪತ್ರ ಬರೆದಿದ್ದು ಕೂಡಲೇ ರಾಜ್ಯದ ಪಾಲಿನ ನೀರನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News