ರಾಜ್ಯಾದ್ಯಂತ ಗುಡುಗು-ಸಿಡಿಲು ಸಹಿತ ಭಾರೀ ಮಳೆ: 6 ಮಂದಿ ಮೃತ್ಯು

Update: 2020-10-11 11:25 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ. 11: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ವಿವಿಧೆಡೆ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಮಳೆಯಿಂದ ಆರು ಮಂದಿ ಮೃತರಾಗಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ತಾಯಿ-ಮಗಳು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಮಹಾದೇವಿ ಭಜಂತ್ರಿ (40) ಹಾಗೂ ಅವರ ಮಗಳು ಸೋನಿ ಭಜಂತ್ರಿ (12) ಮತ್ತು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಅಶೋಕ ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಕಾಡು ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಗಾಳೆಪ್ಪ (50) ಮೃತಪಟ್ಟಿದ್ದಾರೆ.

ಅಲ್ಲದೆ, ರವಿವಾರ ಬೆಳಗಿನಿಂದಲೇ ರಾಜ್ಯದೆಲ್ಲೆಡೆ ಪುನಃ ತುಂತುರು ಮಳೆಯಾಗುತ್ತಿದೆ. ಅ.12ರಂದು ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಲ್ಲಿ ಅ.13ರವರೆಗೂ ಮಳೆಯಾಗುವ ಸಂಭವವಿದೆ. ಬೀದರ್ ಕಲಬುರಗಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ವಿಜಯಪುರದಲ್ಲಿ ಅ.12ರ ವರೆಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ತುಮಕೂರು, ರಾಮನಗರ ಸೇರಿದಂತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ ತಾಲೂಕಿನಲ್ಲಿ ಶನಿವಾರ ಒಂದೇ ದಿನದಲ್ಲಿ 14 ಸೆಂ.ಮೀ. ದಾಖಲೆ ಮಳೆಯಾಗಿದೆ. 2009ರಲ್ಲಿ 18 ಸೆಂ.ಮೀ. ಮಳೆಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟುವಿನಲ್ಲಿ ಅತೀ ಹೆಚ್ಚು ಎಂದರೆ 148 ಮಿ.ಮೀ. ಮಳೆಯಾಗಿದೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ 130 ಮಿ. ಮೀ. ಮಳೆಯಾಗಿದೆ.

ದಾವಣಗೆರೆ, ಧಾರವಾಡ, ಬೆಳಗಾವಿ, ವಿಜಯಪುರ, ಹಾವೇರಿ, ಬಳ್ಳಾರಿ, ಬಾಗಲಕೋಟೆ, ಕೊಡಗು, ಹಾಸನ, ಮಂಡ್ಯ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಈ ನಡುವೆ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅ.13ರವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News