ಹತ್ರಸ್ ಪ್ರಕರಣದ ತನಿಖೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸಲು ಆಗ್ರಹಿಸಿ ಸಿಐಟಿಯು ಪ್ರತಿಭಟನೆ

Update: 2020-10-13 11:52 GMT

ಉಡುಪಿ, ಅ.13: ಹತ್ರಸ್ ದಲಿತ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಮಂಗಳವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಮತ್ತು ಇತರ ಅಧಿಕಾರಿಗಳ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು. ಮೃತ ಯುವತಿಯ ಕುಟುಂಬಕ್ಕೆ ಗರಿಷ್ಠ ರಕ್ಷಣೆ ನೀಡಬೇಕು. ಉನ್ನಾವೋ, ಬಲರಾಮಪುರ ಮತ್ತು ಅಂತಹ ಇತರ ಎಲ್ಲ ಪ್ರಕರಣಗಳಲ್ಲಿ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿ ಕೊಡಬೇಕು. ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ದೌರ್ಜನ್ಯಕ್ಕೆ ಒಳಗಾದವರ ಕುಟುಂಬಗಳಿಗೆ ಕೃಷಿ ಭೂಮಿ, ಸರಕಾರಿ ಉದ್ಯೋಗ, ವಾಸಕ್ಕೆ ಮನೆಗಳನ್ನು ಒದಗಿಸಬೇಕು. ಎಲ್ಲರಿಗೂ ಉದ್ಯೋಗವನ್ನು ಮತ್ತು ಕನಿಷ್ಠ ವೇತನವನ್ನು ಖಚಿತಪಡಿಸಬೇಕು. ಮೀಸಲಾತಿ, ದಲಿತರ ದೌರ್ಜನ್ಯ ತಡೆ ಕಾಯ್ದೆ ಮತ್ತು ಮಹಿಳಾ ದೌರ್ಜನ್ಯ ವಿರೋಧಿ ಕಾಯಿದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ದಲಿತರು ಹಾಗೂ ಮಹಿಳೆಯರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ಅನುದಾನವನ್ನು ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್, ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್, ಜಿಲ್ಲಾ ಖಜಾಂಚಿ ಶಶಿಧರ ಗೊಲ್ಲ, ಮುಖಂಡ ಬಾಲಕೃಷ್ಣ ಶೆಟ್ಟಿ, ಕೃಷಿ ಕೂಲಿಕಾರರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ, ಸಿಐಟಿಯು ಉಡುಪಿ ತಾಲೂಕು ಅಧ್ಯಕ್ಷ ರಾಮ ಕರ್ಕಡ, ಕಾರ್ಯದರ್ಶಿ ಕವಿರಾಜ್, ಮುಖಂಡರಾದ ಬಲ್ಕೀಸ್ ಕುಂದಾಪುರ, ನಳಿನಿ, ಶಕುಂತಳಾ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News