ಮೇಕೆದಾಟು ಯೋಜನೆ: ಮತ್ತೊಮ್ಮೆ ಕೇಂದ್ರ ಸಚಿವರನ್ನು ಭೇಟಿ ಮಾಡಲು ರಮೇಶ್ ಜಾರಕಿಹೊಳಿ ನಿರ್ಧಾರ

Update: 2020-10-13 13:18 GMT

ಬೆಂಗಳೂರು, ಅ.13: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಪುನಃ ಹೊಸದಿಲ್ಲಿಗೆ ತೆರಳಲಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲೆ ಹೊಸದಿಲ್ಲಿಗೆ ತೆರಳಲು ಯೋಚಿಸಿರುವುದಾಗಿ ರಮೇಶ್ ಜಾರಕಿಹೊಳಿ ತಿಳಿಸಿದರು.

ಜಲಸಂಪನ್ಮೂಲ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾಡಾ ಹಾಗೂ ವಾಲ್ಮಿ ಸಂಸ್ಥೆಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಆಧುನಿಕ ಮತ್ತು ಸಾವಯವ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News