ಆರೋಗ್ಯ-ವೈದ್ಯಕೀಯ ಶಿಕ್ಷಣ ಇಲಾಖೆಗಳ ನಡುವೆ ಸಮನ್ವಯತೆ ತರಲು ಸಿಎಂ ಸೂಚನೆ: ಡಾ.ಕೆ.ಸುಧಾಕರ್

Update: 2020-10-13 14:31 GMT

ಬೆಂಗಳೂರು, ಅ.13: ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಎರಡೂ ಇಲಾಖೆಗಳಲ್ಲಿನ ಸಮನ್ವಯದ ಕೊರತೆಯನ್ನು ನೀಗಿಸಿ, ಕೊರೋನ ಸೋಂಕನ್ನು ನಿಯಂತ್ರಣಕ್ಕೆ ತರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕೆಳಹಂತದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಜಿಲ್ಲಾಮಟ್ಟದಲ್ಲಿ ಆರೋಗ್ಯಾಧಿಕಾರಿಗಳು ಆರೋಗ್ಯ ಸಚಿವರಿಗೆ ಹಾಗೂ ಮೆಡಿಕಲ್ ಕಾಲೇಜಿನ ಮುಖ್ಯಸ್ಥರು ವೈದ್ಯಕೀಯ ಶಿಕ್ಷಣ ಸಚಿವರಿಗೆ ವರದಿ ಮಾಡಬೇಕಾಗುತ್ತದೆ. ಅಲ್ಲಿ ಸಮನ್ವಯದ ಕೊರತೆ ಉಂಟಾಗಿದೆ ಎಂದು ಅವರು ಹೇಳಿದರು.

ಬೇರೆ ರಾಜ್ಯಗಳಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಬೇರೆಬೇರೆಯಾಗಿಲ್ಲ. ಈ ಸಮಸ್ಯೆಯನ್ನು ಸರಿಪಡಿಸಿ ಕೊರೋನ ನಿಯಂತ್ರಿಸಬೇಕು. ರಾಜ್ಯದ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ದೊರೆಯಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಸುಧಾಕರ್ ತಿಳಿಸಿದರು.

ಮುಖ್ಯಮಂತ್ರಿ ಸಚಿವ ಸಂಪುಟ ವಿಸ್ತರಣೆ ಮಾಡುವ ಉದ್ದೇಶ ಹೊಂದಿದ್ದರು. ಆದರೆ ಅದನ್ನು ಮುಂದೂಡುವ ಪರಿಸ್ಥಿತಿ ಉಂಟಾಗಿದೆ. ಆದುದರಿಂದ, ಎರಡು ಇಲಾಖೆಗಳಲ್ಲಿ ಸಮನ್ವಯ ಸಾಧಿಸುವ ಉದ್ದೇಶದಿಂದ ಖಾತೆ ಬದಲಿಸಲಾಗಿದೆ. ಎರಡೂ ಇಲಾಖೆಗಳಲ್ಲಿನ ಸಮನ್ವಯವನ್ನು ಸರಿ ಮಾಡಿ, ಕೊರೋನ ಸೋಂಕನ್ನು ನಿಯಂತ್ರಣಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಅವರು ವಿವರಿಸಿದರು.

ನಾನು ಹಾಗೂ ಸಚಿವ ಶ್ರೀರಾಮುಲು ಇಬ್ಬರೂ ಕಳೆದ ಆರು ತಿಂಗಳಿಂದ ಪರಿಶ್ರಮದಿಂದ ಕೆಲಸ ಮಾಡಿದ್ದೇವೆ. ಇದರಲ್ಲಿ ಯಾರು ಹೆಚ್ಚು, ಯಾರು ಕಡಿಮೆ ಎನ್ನುವ ಪ್ರಶ್ನೆಯೇ ಇಲ್ಲ. ಇದು ರಾಜ್ಯದ ಜನರ ಆರೋಗ್ಯದ ಪ್ರಶ್ನೆ ಎಂದು ಸುಧಾಕರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News