ಪ್ರಕರಣ ರದ್ದು ಕೋರಿ ಪ್ರಕಾಶ್ ರಾಜ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2020-10-13 16:06 GMT

ಬೆಂಗಳೂರು, ಅ.13: ಕಳೆದ ಲೋಕಸಭೆ ಚುನಾವಣೆಯ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸುವಂತೆ ಕೋರಿ ನಟ ಪ್ರಕಾಶ್ ರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತು ಪ್ರಕಾಶ್ ರೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

2019ರ ಲೋಕಸಭಾ ಚುನಾವಣೆ ವೇಳೆ ಎಂ.ಜಿ ರಸ್ತೆಯಲ್ಲಿ ಅನುಮತಿ ಇಲ್ಲದೇ ನಟ ಪ್ರಕಾಶ್ ರಾಜ್ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಬಿಬಿಎಂಪಿ ಫ್ಲೈಯಿಂಗ್ ಸ್ಕ್ವಾಡ್ ಕೇಸ್ ದಾಖಲಿಸಿತ್ತು. ನಂತರ ತನಿಖೆ ನಡೆಸಿದ್ದ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು. ಆ ಪ್ರಕರಣ ರದ್ದು ಕೋರಿ ಪ್ರಕಾಶ್ ರೈ ಹೈಕೋರ್ಟ್ ಮೊರೆ ಹೋಗಿದ್ದರು.

ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಗ್ರಾಮ ಸೇವಾ ಸಂಘದಿಂದ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಅವರು ಭಾಗವಹಿಸಿದ್ದರು. ಈ ಸಂಬಂಧ ಪ್ರಕಾಶ್ ರಾಜ್ ವಿರುದ್ಧ ಕಬ್ಬನ್ ಪಾರ್ಕ್‍ನಲ್ಲಿ ದೂರು ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News