ಕಬ್ಬನ್ ಪಾರ್ಕ್‍ನಲ್ಲಿ ವಾಹನಗಳ ಸಂಚಾರ ನಿರ್ಬಂಧ ಕೋರಿ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-10-13 16:11 GMT

ಬೆಂಗಳೂರು, ಅ.13: ಕಬ್ಬನ್ ಪಾರ್ಕ್‍ನಲ್ಲಿ ವಾಹನಗಳ ಸಂಚಾರ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ನ್ಯಾಯಮೂರ್ತಿ ಎನ್.ಎಸ್.ಸಂಜಯ್‍ಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ, ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವುದರಿಂದ ಪರಿಸರದ ಮೇಲೆ ಹಾನಿ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಸಾವಿರಾರು ಜನರು ಪಾರ್ಕ್ ಗೆ ಭೇಟಿ ಕೊಡುತ್ತಾರೆ, ಇದಕ್ಕೂ ತೊಂದರೆ ಆಗುತ್ತದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಗೆ ಸಾರ್ವಜನಿಕ ಪ್ರವೇಶ ಮತ್ತು ವಾಹನಗಳ ಸಂಚಾರ ನಿಷೇಧಿಸಲಾಗಿತ್ತು. ಲಾಕ್‍ಡೌನ್ ಸಡಿಲಿಕೆಗೊಂಡ ಬಳಿಕ ಸಾರ್ವಜನಕ ಪ್ರವೇಶ ಹಾಗೂ ವಾಹನ ಸಂಚಾರಕ್ಕೆ ರಸ್ತೆಗಳನ್ನು ಮುಕ್ತಗೊಳಿಸಿ ರಾಜ್ಯ ತೋಟಗಾರಿಕೆ ಇಲಾಖೆ ಸುತ್ತೋಲೆ ಹೊರಡಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News